ಕೋಲಾರ : ಜಿಲ್ಲೆಯಲ್ಲಿ ಒಟ್ಟು 2180 ಅಂಗನವಾಡಿಗಳು ಕಾರ್ಯನಿರ್ವಹಿಸುತ್ತಿದ್ದು ಅದರಲ್ಲಿ ಒಟ್ಟು 462 ಕಟ್ಟಡಗಳು ಬಾಡಿಗೆಯ ಕಟ್ಟಡಗಳಾಗಿವೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಹೇಳಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಹೊಸ ಅಂಗನವಾಡಿ ಕಟ್ಟಡ ನಿರ್ಮಾಣ ನಿವೇಶನ ಲಭ್ಯತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತಾಲ್ಲೂಕುವಾರು ನಿವೇಶನ ಇರುವ ಹಾಗೂ ಇಲ್ಲದೆ ಇರುವ ಅಂಗನವಾಡಿ ಕೇಂದ್ರಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಜಾಗ ಇದೆಯೇ ಎಂಬ ಮಾಹಿತಿಯನ್ನು ಪಡೆದರು.
ತಮ್ಮ ಶಾಲಾ ವ್ಯಾಪ್ತಿಯಲ್ಲಿ ಇರುವ ಅಂಗನವಾಡಿ ಕಟ್ಟಡಗಳ ಬಗ್ಗೆ ಶಿಕ್ಷಣ ಇಲಾಖೆಯವರ ಜೊತೆ ಮಾತನಾಡಿ ತಮ್ಮ ಹಂತದಲ್ಲಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಿ ಎಂದು ಹೇಳಿದರು.
ನಗರ ಪ್ರದೇಶ ವ್ಯಾಪ್ತಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನಾಡಿ ಹೊಸ ಕಟ್ಟಡ ನಿರ್ಮಾಣ ಮಾಡುವುದಕ್ಕೆ ಖಾಲಿ ಸ್ಥಳವನ್ನು ನೀಡುವಂತೆ ಹಾಗೂ ಕಟ್ಟಡ ಕಾಮಗಾರಿಗಳು ಪೂರ್ಣಗೊಂಡಿರುವ ಹೊಸ ಕಟ್ಟಡಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಹಸ್ತಾಂತರಿಸಲು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಶಾಸಕರು ಹಾಗೂ ಸಂಸದರ ಅನುದಾನದಲ್ಲಿ ನಿರ್ಮಾಣವಾಗಿರುವ ಸಮುದಾಯ ಭವನಗಳ ಪಟ್ಟಿಮಾಡಿ ಮುಂದಿನ ಸಭೆಗೆ ಬರುವ ಮುನ್ನ ವರದಿಯನ್ನು ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪದ್ಮ ಬಸವಂತಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವಂಶಿಕೃಷ್ಣ, ಡಿ.ಡಿ.ಪಿ.ಐ. ಕೃಷ್ಣಮೂರ್ತಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಸುಮ, ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಇಓ ಗಳು, ಸಿ.ಡಿ.ಪಿ.ಒ ಗಳು, ನಗರಸಭೆ ಹಾಗೂ ಪುರಸಭೆಯ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.