ಕೋಲಾರ : ಬಾಲಕಾರ್ಮಿಕ ಎಂಬ ಅನಿಷ್ಟ ಪದ್ಧತಿಯನ್ನು ನಿರ್ಮೂಲನೆ ಮಾಡಬೇಕು . ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀ ಸುನಿಲ್ ಎಸ್ ಹೊಸಮನಿ ಅವರು ತಿಳಿಸಿದರು .
ಇಂದು ಮೌಲಾನ ಅಜಾದ್ ಮಾದರಿ ಶಾಲೆ , ದರ್ಗಾಮೊಹಲ್ಲಾ , ಕೋಲಾರದಲ್ಲಿ ಜಿಲ್ಲಾಡಳಿತ , ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ , ಕಾರ್ಮಿಕ ಇಲಾಖೆ , ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ , ಕೋಲಾರ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಬಾಲಕಾರ್ಮಿಕ ಪದ್ಧತಿ ನಿರ್ಮೂಲನಾ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು . ಯಾವುದೇ ಮಕ್ಕಳು ಗ್ಯಾರೇಜ್ , ಹೋಟೆಲ್ , ಮಟನ್ , ಚಿಕನ್ ಶಾಪ್‌ಗಳಲ್ಲಿ ಕೆಲಸಕ್ಕೆ ಹೋಗಬಾರದೆಂದು ತಿಳಿಸಿದರು .
ಶಿಕ್ಷಣ ಮಕ್ಕಳ ಮೂಲ ಹಕ್ಕಾಗಿದೆ ಸಮಾಜದಲ್ಲಿ ಬಾಲಕಾರ್ಮಿಕರನ್ನು ಕಂಡರೆ ಅಂತವರನ್ನು ಗುರುತಿಸಿ ಶಾಲೆಗೆ ಸೇರಿಸುವುದು ಪ್ರತಿಯೊಬ್ಬರ ಕರ್ತವ್ಯ ಮಕ್ಕಳು ಬಾಲ್ಯಜೀವನದಲ್ಲಿ ಒಳ್ಳೆಯ ಗುಣಗಳನ್ನು ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಮತಿ ಶಬಾನಾ ಅಜ್ಜಿರವರು ಮಾತನಾಡಿ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ( ನಿಷೇಧ ಮತ್ತು ನಿಯಂತ್ರಣ ) ಕಾಯ್ದೆ , 1986 ರ ಅನ್ವಯ ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿ ಕೊಳ್ಳುವುದು ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಹಾಗೂ ಸಂಜೆಯ ( ವಾರೆಂಟ್ ರಹಿತ ಬಂಧಿಸಬಹುದಾದ ) ಅಪರಾಧವಾಗಿದೆ .
ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ( ನಿಷೇಧ ಮತ್ತು ನಿಯಂತ್ರಣ ) ಕಾಯ್ದೆ , 1986 ರಂತೆ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರನ್ನು ಕೆಲಸಕ್ಕೆ ನಿಯೋಜಿಸಿಕೊಂಡಲ್ಲಿ ಅಂತಹಮೊದಲ ಅಪರಾಧಕ್ಕೆ ಮಾಲೀಕರಿಗೆ 6 ತಿಂಗಳಿಂದ 2 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ರೂ .20,000 / – ರಿಂದ ರೂ .50,000 / -ಗಳವರೆಗೆ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿರುತ್ತದೆ .
ಪುನರಾವರ್ತಿತ ಅಪರಾಧಕ್ಕೆ 1 ವರ್ಷದಿಂದ 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿರುತ್ತದೆ ಎಂದು ತಿಳಿಸಿದರು .
ಹಿರಿಯ ವಕೀಲರಾದ ಶ್ರೀ ಕೆ.ಆರ್.ಧನರಾಜ್‌ರವರು ಮಾತನಾಡಿ ಮಕ್ಕಳು ಮತ್ತು ಮಹಿಳೆಯರಿಗೆ ಜಿಲ್ಲಾ ಕಾನೂನು ಸೇ ಪ್ರಾಧಿಕಾರದಿಂದ ಉಚಿತ ಕಾನೂನು ನೆರವನ್ನು ಪಡೆಯ ಬಹುದಾಗಿದ್ದು , ಮಕ್ಕಳು ಯಾವುದೇ ರೀತಿಯ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಳ್ಳಬಾರದು ಎಂದು ತಿಳಿಸಿದರು .
ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರಾದ ಕುಮಾರಿ ಶೃತಿ ಡಿ ಹಾಗೂ ಶಾಲೆಯ ಸಿಬ್ಬಂದಿ ಮತ್ತು ಮಕ್ಕಳು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು .