

ಕುಂದಾಪುರ: ಸುಮಾರು ಮೂರು ದಶಕಗಳ ಕಾಲ ಗಂಗೊಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅಧಿಕಾರ ನಡೆಸುತ್ತಿದ್ದ ಬಿಜೆಪಿ ಬೆಂಬಲಿತರ ಸುದೀರ್ಘ ಅವಧಿಯ ಆಳ್ವಿಕೆಯನ್ನು ಕೊನೆಗೊಳಿಸಿ ಕಾಂಗ್ರೆಸ್ ಪಕ್ಷದ ಪರವಾಗಿರುವ ಅಭ್ಯರ್ಥಿಗಳ ಪರ ಮತ ನೀಡಿದ ಗಂಗೊಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮಗ್ರ ಮತದಾರರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ತಿಳಿಸಿದ್ದಾರೆ.
ರಾಜ್ಯದ ಪ್ರಮುಖ ಬಂದರು ನಗರಿಗಳಲ್ಲಿ ಒಂದಾಗಿರುವ ಗಂಗೊಳ್ಳಿಯ ಸ್ಥಳೀಯ ಸಮಸ್ಯೆಗಳನ್ನು ಕಡೆಗಣಿಸಿದ್ದರಿಂದ ಹಾಗೂ ಜನರ ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳು ಕಳೆದ ವರ್ಷಗಳಲ್ಲಿ ನಡೆಯದೆ ಇದ್ದುದರಿಂದ ಗಂಗೊಳ್ಳಿ ಪ್ರಬುದ್ಧ ಮತದಾರರು, ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇಟ್ಟು ಕಾಂಗ್ರೆಸ್ ಪರವಾದ ಅಭ್ಯರ್ಥಿಗಳಿಗೆ ಹೆಚ್ಚಿನ ಮತ ನೀಡುವ ಮೂಲಕ ಐತಿಹಾಸಿಕ ನಿರ್ಧಾರ ಹಾಗೂ ಬದಲಾವಣೆ ಮಾಡಿದ್ದಾರೆ.
ಗಂಗೊಳ್ಳಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಹಗಲಿರುಳು ಶೃಮಿಸಿದ ಪಕ್ಷದ ಕಾರ್ಯಕರ್ತರು, ವೀಕ್ಷಕರು ಹಾಗೂ ಮುಖಂಡರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಅವರು, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.