

ಬ್ರಹ್ಮಾವರ ಸೆಪ್ಟೆಂಬರ್ 28: ಹೆತ್ತ ತಾಯಿಯನ್ನೇ, ಮಗನು ರಸ್ತೆ ಬದಿ ಬಿಟ್ಟು ಪರಾರಿಯಾಗಿರುವ ಮನಕಲಕುವ ಹಾಗೂ ಅಮಾನವೀಯ ಘಟನೆಯೊಂದು ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಬೆಳಕಿಗೆ ಬಂದಿದೆ.
ಬ್ರಹ್ಮಾವರದ ಎಸ್ಎಮ್ಎಸ್ (SMS) ಆಂಗ್ಲ ಮಾಧ್ಯಮ ಶಾಲೆಯ ಸಮೀಪ ವೃದ್ಧೆಯೊಬ್ಬರು ದಿಕ್ಕು ತೋಚದೆ ಕಂಗಾಲಾಗಿ ಚಡಪಡಿಸುತ್ತಿರುವುದನ್ನು ಶಾಲಾ ಬಸ್ ಚಾಲಕ ರಾಮನಾಥ್ ಶೆಣೈ ಗಮನಿಸಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಅವರು, ಉಡುಪಿಯ ಪ್ರಸಿದ್ಧ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಸಮಾಜ ಸೇವಕ ನಿತ್ಯಾನಂದ ಒಳಕಾಡು, ‘112’ ತುರ್ತು ಪೊಲೀಸ್ ಸಹಾಯವಾಣಿ ಸಿಬ್ಬಂದಿಯ ನೆರವಿನೊಂದಿಗೆ ವೃದ್ಧೆಯನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಬಳಿಕ ಅವರನ್ನು ಚಿಕಿತ್ಸೆ ಹಾಗೂ ಆರೈಕೆಗಾಗಿ ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯಲ್ಲಿ ದಾಖಲಾತಿ ಪ್ರಕ್ರಿಯೆಯ ವೇಳೆ ವೃದ್ಧೆ ತನ್ನ ಹೆಸರು ಸರಸ್ವತಿ (70) ಎಂದು ತಿಳಿಸಿದ್ದು, ತಾನು ತಮಿಳುನಾಡಿನ ತಿರುವಳ್ಳುವೂರು ನಿವಾಸಿ ಎಂದು ಹೇಳಿಕೊಂಡಿದ್ದಾರೆ. “ತನ್ನ ಸ್ವಂತ ಮಗನೇ ತನ್ನನ್ನು ಕಾರಿನಲ್ಲಿ ಕರೆತಂದು, ಬ್ರಹ್ಮಾವರದ ರಸ್ತೆ ಬದಿಯಲ್ಲಿ ಬಿಟ್ಟು ವಾಪಸ್ ತೆರಳಿದ್ದಾನೆ” ಎಂದು ಅಳುತ್ತಾ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಹಿರಿಯ ಜೀವಕ್ಕೆ ಎದುರಾದ ಈ ಕಷ್ಟಕ್ಕೆ ಸ್ಪಂದಿಸಿದ ನಿತ್ಯಾನಂದ ಒಳಕಾಡು ಅವರು ತಕ್ಷಣವೇ ಉಡುಪಿ ಮಹಿಳಾ ಪೊಲೀಸ್ ಠಾಣೆ ಹಾಗೂ ಹಿರಿಯ ನಾಗರಿಕರ ಸಹಾಯವಾಣಿಗೆ (Senior Citizen Helpline) ಮೌಖಿಕವಾಗಿ ಮಾಹಿತಿ ನೀಡಿದ್ದಾರೆ. ಕೃತ್ಯ ಎಸಗಿದ ಹೆತ್ತ ಮಗನ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಹಾಗೂ ವೃದ್ಧೆಗೆ ಸೂಕ್ತ ಪುನರ್ವಸತಿ ಕಲ್ಪಿಸುವಂತೆ ಮನವಿ ಮಾಡಲಾಗಿದೆ.

