ಬೆಂಗಳೂರು (ಮೇ.06): ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮೇ 7ರಿಂದ 12 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 7ರಂದು ಕರಾವಳಿಯ ಜಿಲ್ಲೆಗಳು ಹಾಗೂ ದಕ್ಷಿಣ ಕರ್ನಾಟಕದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ ಹಾಗೂ ತುಮಕೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಮೇ 8ರಿಂದ ಮಳೆ ಬಿರುಸುಗೊಳ್ಳಲಿದೆ ಎಂದು ತಿಳಿಸಿದೆ.
ಮೇ 8ರಿಂದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆ ಆರಂಭವಾಗಲಿದೆ. ಮೇ 9ರ ನಂತರ ವಿವಿಧ ಜಿಲ್ಲೆಗಳನ್ನು ವ್ಯಾಪಿಸಲಿದ್ದು, ಹಗುರ ಮಳೆಯಾಗಲಿದೆ. ಮೇ 5ರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ಹವಾಮಾನ ವರದಿ ಪ್ರಕಾರ ಚಾಮರಾಜನಗರದಲ್ಲಿ 4 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ ಅತಿ ಹೆಚ್ಚು 44.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.