

ಶ್ರೀನಿವಾಸಪುರ : ಹಾಲು ಉತ್ತಮ ಗುಣಮಟ್ಟದಲ್ಲಿದ್ದರೆ ಮಾತ್ರ ಅದಕ್ಕೆ ಹೆಚ್ಚಿನ ಬೆಲೆ ಲಭ್ಯವಾಗುತ್ತದೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.
ತಾಲ್ಲೂಕಿನ ಆರ್. ತಿಮ್ಮಸಂದ್ರ ಗ್ರಾಮದಲ್ಲಿ ಭಾನುವಾರ ಹಾಲು ಉತ್ಪಾದಕರ ಸಂಘದ ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂಘದ ಲೆಕ್ಕಪತ್ರಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಹೈನುಗಾರಿಕೆ ಒಂದು ದೊಡ್ಡ ಉದ್ಯಮವಾಗಿದ್ದು, ಅದನ್ನು ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸುವುದು ಅಗತ್ಯ ಎಂದು ಹೇಳಿದರು.
ದಿವಂಗತ ಎಂ.ವಿ. ಕೃಷ್ಣಪ್ಪ ಅವರು ಕ್ಷೀರ ಕ್ರಾಂತಿಯ ಹರಿಕಾರರಾಗಿದ್ದು, ಅವರ ಸೇವೆ ಸೂರ್ಯ-ಚಂದ್ರರಿರುವ ತನಕ ಶಾಶ್ವತವಾಗಿ ಉಳಿಯುತ್ತದೆ ಎಂದು ಸ್ಮರಿಸಿದರು.
ಅಡ್ಡಗಲ್ ಕ್ಷೇತ್ರ ಕೋಮುಲ್ ನಿರ್ದೇಶಕ ಕೆ.ಕೆ. ಮಂಜುನಾಥ್ ಮಾತನಾಡಿ, ಎಲ್ಲಾ ಹಾಲು ಉತ್ಪಾದಕರು ಕಡ್ಡಾಯವಾಗಿ ಪಶುಗಳ ವಿಮೆ ಮಾಡಿಸಬೇಕು.
ವಿಮಾ ಪರಿಹಾರ ಪಡೆದ ಫಲಾನುಭವಿಗಳು ಅದನ್ನು ಸಮರ್ಪಕವಾಗಿ ಬಳಸಿಕೊಂಡು ಪಶುಗಳನ್ನು ಖರೀದಿಸಿ, ಉತ್ತಮ ಗುಣಮಟ್ಟದ ಹಾಲು ಉತ್ಪಾದನೆಗೆ ಉತ್ತೇಜನ ನೀಡಬೇಕು ಎಂದು ಸಲಹೆ ನೀಡಿದರು. ಜೊತೆಗೆ ಒಕ್ಕೂಟದಿಂದ ದೊರೆಯುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದರು.
ಕೋಮುಲ್ ಸೌಲಭ್ಯಗಳ ಕುರಿತು ಶ್ರೀನಿವಾಸಪುರ ಉಪಶಾಖೆಯ ವ್ಯವಸ್ಥಾಪಕ ಕೆ.ಎಂ. ಮುನಿರಾಜ್ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕ ಜಿ.ಸಿ. ಮಂಜುನಾಥರೆಡ್ಡಿ, ಜಿ.ಪಂ. ಮಾಜಿ ಅಧ್ಯಕ್ಷ ತೂಪಲ್ಲಿ ಆರ್. ನಾರಾಯಣಸ್ವಾಮಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಆಶಾ ಮಹೇಶ್, ವಿಸ್ತರಣಾಧಿಕಾರಿಗಳಾದ ಶಂಕರ್, ವಿನಾಯಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹಾಲು ಉತ್ಪಾದಕರ ಸಂಘದ ಅಧ್ಯಕ್ಷೆ ರುಕ್ಮಿಣಿಯಮ್ಮ ಶ್ರೀನಿವಾಸರೆಡ್ಡಿ, ಉಪಾಧ್ಯಕ್ಷ ಟಿ.ವಿ. ನಾರಾಯಣಸ್ವಾಮಿ, ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

