

ಕುಂದಾಪುರ; “ಪ್ರಪಂಚದ ಬೇರೆ ಬೇರೆ ದೇಶಗಳ ಸಂವಿಧಾನಗಳನ್ನು ಅಧ್ಯಯನ ಮಾಡಿ, ಅಲ್ಲಿಯ ಒಳ್ಳೆಯ ಅಂಶಗಳನ್ನು ಭಾರತದ ಸಂವಿಧಾನದಲ್ಲಿ ಅಳವಡಿಸಿದ ಡಾ. ಬಿ. ಆರ್. ಅಂಬೇಡ್ಕರ್ ರವರದ್ದು ಮಹಾನ್ ವ್ಯಕ್ತಿತ್ವ. ಸಮಾಜದಲ್ಲಿ ವರ್ಗಸಮತೋಲನ ಸಾಧಿಸುವ ಸಲುವಾಗಿ ಅವರು ಜಾರಿಗೆ ತಂದ ಮೀಸಲಾತಿ ಸೌಲಭ್ಯವನ್ನು ಇನ್ನೂ ಅರ್ಥಪೂರ್ಣವಾಗಿ ಅನುಷ್ಠಾನಗೊಳಿಸುವ ಅಗತ್ಯವಿದೆ ” ಎಂದು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ ಕುಮಾರ ಶೆಟ್ಟಿಯವರು ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ತಿಳಿಸಿದರು. ಕಾರ್ಯಕ್ರಮವನ್ನು ನಿರ್ವಹಿಸಿದ ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ಕೃಷ್ಣಮೂರ್ತಿ ಡಿ.ಬಿ ಯವರು ಅಂಬೇಡ್ಕರ್ ರವರ ಬದುಕಿನಲ್ಲಿದ್ದ ಕಠಿಣ ಸವಾಲುಗಳು ಮತ್ತು ಅವುಗಳನ್ನು ಅವರು ಸಮರ್ಥವಾಗಿ ನಿಭಾಯಿಸಿ ಯಶಸ್ವಿ ಮೈಲಿಗಲ್ಲುಗಳನ್ನು ಸಾಧಿಸಿದ ಬಗ್ಗೆ ವಿವರಿಸಿದರು. ಕಾಲೇಜಿನ ಬೋಧಕ- ಬೋಧಕೇತರ ಸಿಬ್ಬಂಧಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ ಛಾಯಾಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.