ಕ್ಷಯದ ಲಕ್ಷಣ ಕಂಡುಬಂದಲ್ಲಿ ತಕ್ಷಣ ತಜ್ಞ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದುಕೊಳ್ಳಬೇಕು : ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಾಥ್

ಶ್ರೀನಿವಾಸಪುರ: ಕ್ಷಯದ ಲಕ್ಷಣ ಕಂಡುಬಂದಲ್ಲಿ ತಕ್ಷಣ ತಜ್ಞ ವೈದ್ಯರನ್ನು ಸಂಪರ್ಕಿಸಿ ಅಗತ್ಯ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಾಥ್ ಹೇಳಿದರು.
ತಾಲ್ಲೂಕಿನ ಮುತ್ತಕಪಲ್ಲಿ ಗ್ರಾಮದಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ ವತಿಯಿಂದ ಗುರುವಾರ ಏರ್ಪಡಿಸಿದ್ದ ಪ್ರಧಾನ ಮಂತ್ರಿ ಕ್ಷಯ ಮುಕ್ತ ಗ್ರಾಮ ಪಂಚಾಯಿತಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕ್ಷಯ ರೋಗಿಗಳನ್ನು ಮಾನವೀಯ ದೃಷ್ಟಿಯಿಂದ ನೋಡಬೇಕು. ಗ್ರಾಮೀಣ ಪ್ರದೇಶದ ಕ್ಷಯ ರೋಗಿಗಳಿಗೆ ಅಗತ್ಯ ಮಾರ್ಗದರ್ಶನ ನೀಡಿ ಸಂಬಂಧಿಸಿದ ಆಸ್ಪತ್ರೆಗೆ ಕಳಿಸಿಕೊಡಬೇಕು ಎಂದು ಹೇಳಿದರು.
ಮುತ್ತಕಪಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮೇಘ ಶ್ಯಾಮ್ ಮಾತನಾಡಿ, ಸಾರ್ವಜನಿಕರು ಕ್ಷಯ ರೋಗದ ಬಗ್ಗೆ ಗಾಬರಿಪಡಬೇಕಾದ ಅಗತ್ಯವಿಲ್ಲ. ಅದೊಂದು ವಾಸಿಯಾಗಬಲ್ಲ ರೋಗವಾಗಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ದೊರೆಯುತ್ತದೆ. ರೋಗ ಕಾಣಿಸಿಕೊಂಡ ತಕ್ಷಣ ವಿಳಂಬ ಮಾಡದೆ ಚಿಕಿತ್ಸೆ ಪಡೆಯಬೇಕು ಎಂದು ಹೇಳಿದರು.
ಆರೋಗ್ಯ ಕಾರ್ಯಕರ್ತರು ಗ್ರಾಮೀಣ ಪ್ರದೇಶದ ನಾಗರಿಕರಿಗೆ ಕ್ಷಯ ರೋಗದ ಬಗ್ಗೆ ಅರಿವು ಮೂಡಿಸಬೇಕು. ಈ ಕಾರ್ಯದಲ್ಲಿ ವಿದ್ಯಾರ್ಥಿಗಳು ಹಾಗೂ ವಿದ್ಯಾವಂತ ಸಮುದಾಯ ಭಾಗಿಯಾಗಬೇಕು. ಕ್ಷಯ ಮುಕ್ತ ಗ್ರಾಮ ಪಂಚಾಯಿತಿಯನ್ನಾಗಿಸಲು ಸಾಂಘಿಕ ಪ್ರಯತ್ನ ನಡೆಸಬೇಕು ಎಂದು ಹೇಳಿದರು.
ಮುತ್ತಕಪಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ಗಿರೀಶ್ ಮಾತನಾಡಿ, ಕಾಯಿಲೆ ಬಗ್ಗೆ ನಿರ್ಲಕ್ಷ್ಯ ವಹಿಸುವುದರಿಂದ ಅದು ಉಲ್ಬಣಗೊಳ್ಳುತ್ತದೆ. ಕಾಯಿಲೆ ಬಂದ ಮೇಲೆ ವಾಸಿಮಾಡಿಕೊಳ್ಳಲು ಹೆಣಗಾಡುವ ಬದಲು, ಕಾಯಿಲೆ ಬರದಂತೆ ಎಚ್ಚರ ವಹಿಸಬೇಕು. ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾದಲ್ಲಿ ವೈದ್ಯರಿಂದ ಚಿಕಿತ್ಸೆ ಪಡೆದು ವಾಸಿಮಾಡಿಕೊಳ್ಳಬೇಕು ಎಂದು ಹೇಳಿದರು.
ಹಿರಿಯ ಆರೋಗ್ಯ ನಿರೀಕ್ಷಕ ಧರ್ಮರಾಜ, ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.