ಶ್ರೀನಿವಾಸಪುರ: ಸರ್ಕಾರದ ಸೌಲಭ್ಯ ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ದೊರೆಯಬೇಕು ಎಂಬುದು ಸರ್ಕಾರದ ಆಶಯವಾಗಿದೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ತಾಲ್ಲೂಕಿನ ಚಲ್ದಿಗಾನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಭಾನುವಾರ ಏರ್ಪಡಿಸಿದ್ದ ದಿವಂಗತ ವಕೀಲ ಕೆ.ಮುನಿಸ್ವಾಮಿಗೌಡ ಅವರ ಜನ್ಮ ಶತಮಾನೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಮುನಿಸ್ವಾಮಿಗೌಡ ಅವರು ಶಿಕ್ಷಣ ಪ್ರೇಮಿಯಾಗಿದ್ದರು ಹಾಗೂ ಸಮಾಜ ಮುಖಿ ಧೋರಣೆ ಹೊಂದಿದ್ದರು ಎಂದು ಹೇಳಿದರು.
ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗೆ ಕಡಿಮೆ ಇಲ್ಲದಂತೆ ಕಾರ್ಯನಿರ್ವಹಿಸುತ್ತಿವೆ. ಗುಣಾತ್ಮಕ ಶಿಕ್ಷಣ ಇಂದು ಖಾಸಗಿ ಶಾಲಾ ಶಕ್ಷಣಕ್ಕೆ ಮೀಸಲಾಗಿಲ್ಲ. ಹಾಗಾಗಿ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು. ಪ್ರತಿ ಗ್ರಾಮ ಪಂಚಾಯಿತಿಗೊಂದು ಮಾದರಿ ಶಾಲೆ ತೆರೆದು, ಅಗತ್ಯವಿರುವ ಮೂಲ ಸೌಕರ್ಯ ಒದಗಿಸುವ ಚಿಂತನೆ ನಡೆದಿದೆ. ಶಿಕ್ಷಕರು ಅದಕ್ಕೆ ಪೂರಕವಾಗಿ ಕಾರ್ಯನಿರ್ವಹಿಸಿ ಗುಣಾತ್ಮಕ ಶಿಕ್ಷಣ ನೀಡಬೇಕು ಎಂದು ಹೇಳಿದರು.
ಕೆ.ಮುನಿಸ್ವಾಮಿ ಅವರ ಪುತ್ರ ಹಾಗೂ ಹೈಕೋರ್ಟ್ ವಕೀಲ ಎಂ.ಶಿವಪ್ರಕಾಶ್ ಮಾತನಾಡಿ, ಮುನಿಸ್ವಾಮಿ ಗೌಡರಿಗೆ ಹುಟ್ಟೂರಿನ ಅಭಿವೃದ್ಧಿ ಬಗ್ಗೆ ಹೆಚ್ಚಿನ ಕಾಳಜಿ ಇತ್ತು. ಹಾಗಾಗಿ ಶಿಕ್ಷಣದಿಂದಲೇ ಗ್ರಾಮದ ಅಭಿವೃದ್ಧಿ ಸಾಧ್ಯ ಎಂದು ನಂಬಿದ್ದರು. ಆದ್ದರಿಂದಲೇ ಗ್ರಾಮದಲ್ಲಿ ಶಾಲೆ ನಿರ್ಮಿಸಲು ಇದ್ದ ಅಡ್ಡಿ ತೊಲಗಿಸಿ, ಸ್ವಂತ ಹಣದಿಂದ ಶಾಲಾ ಕೊಠಡಿ ನಿರ್ಮಿಸಿಕೊಟ್ಟಿದ್ದರು. ಕರ್ತವ್ಯವೇ ದೇವರು ಎಂದು ತಿಳಿದ್ದಿದ್ದ ಅವರು ನ್ಯಾಯವಾದಿಯಾಗಿ ನ್ಯಾಯ ದೊರಕಿಸಿಕೊಡಲು ಶ್ರಮಿಸಿದ್ದಾರೆ ಎಂದು ಹೇಳಿದರು.
ಸಾಹಿತಿ ಹರಿಹರ ಪ್ರಿಯ ಮಾತನಾಡಿ, ಕೆ.ಮುನಿಸ್ವಾಮಿ ಗೌಡರ ಸರಳ ಸಜ್ಜನಿಕೆ ಇಂದಿನ ಯುವ ಸಮುದಾಯಕ್ಕೆ ಮಾದರಿಯಾಗಿದೆ. ವಕೀಲರಾಗಿ, ಶಿಕ್ಷಣ ಪ್ರೇಮಿಯಾಗಿ ಹಾಗೂ ಸಮಾಜ ಸೇವಕರಾಗಿ ಉತ್ತಮ ಸೇವೆ ಮಾಡಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಲೇಖನ ಸಾಮಗ್ರಿ ವಿತರಿಸಲಾಯಿತು. ಶಾಲಾ ಆವರಣದಲ್ಲಿ ಗಿಡ ನೆಡಲಾಯಿತು. ಶಿಕ್ಷಕರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಲಕ್ಷ್ಮೀನಾರಾಯಣ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಲ್.ಗೋಪಾಲಕೃಷ್ಣ, ನಾಟಕಕಾರ ಕೋಟಿಗಾನಹಳ್ಳಿ ರಾಮಯ್ಯ, ಗಾಯಕ ಪಿಚ್ಚಳ್ಳಿ ಶ್ರೀನಿವಾಸ್, ಡಾ.ಬೋರಪ್ಪ, ಡಾ.ಜಗದೀಶ್, ಕೆ.ಆರ್.ನರಸಿಂಹಪ್ಪ ಇದ್ದರು.