

ಬೆಂಗಳೂರು: ಪತ್ರಕರ್ತರು ಸದಾ ಒತ್ತಡದಲ್ಲಿರುತ್ತಾರೆ. ವೃತ್ತಿಯಲ್ಲಿ ಸಕ್ರೀಯರಾಗಬೇಕಾದರೆ, ಸದಾ ಆರೋಗ್ಯವನ್ನು ಕಾಪಾಡಬೇಕಾಗಿರುವುದು ಬಹಳ ಮುಖ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡುರಾವ್ ಅಭಿಪ್ರಾಯಪಟ್ಟರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಮತ್ತು ಬಿಬಿಎಂಪಿ ಸಹಯೋಗದೊಂದಿಗೆ ಪತ್ರಕರ್ತರಿಗೆ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪತ್ರಕರ್ತರು ಸಮಾಜ ಮತ್ತು ಸರ್ಕಾರದ ನಡುವಿನ ಸಂಪರ್ಕ ಸೇತುವೆಯಂತೆ ಕಾರ್ಯವೆಸಗುತ್ತಿರುವ ಕಾರಣ ಶಿಸ್ತಿನ ಜೀವನವನ್ನು ಪಾಲಿಸಬೇಕಾಗುತ್ತದೆ. ಹಾಗಾಗಿ ನಿರಂತರ ಆರೋಗ್ಯ ತಪಾಸಣೆಗಳೂ ಅವರಿಗೆ ಅತ್ಯಗತ್ಯ ಎಂದು ಅವರು ಹೇಳಿದರು.
ಆರೋಗ್ಯದ ಬಗ್ಗೆ ಯಾವುದೇ ಕಾರಣಕ್ಕೆ ನಿರ್ಲಕ್ಷ್ಯ ವಹಿಸಬಾರದು. ರೋಗ ಬರುವ ಮುನ್ನವೇ ಆಗಿಂದಾಗ್ಗೆ ತಪಾಸಣೆ ಮಾಡಿಸಿಕೊಂಡು ಜಾಗ್ರತೆ ವಹಿಸಿದರೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ಈ ನಿಟ್ಟಿನಲ್ಲಿ ಕೆಯುಡಬ್ಲ್ಯೂಜೆ ಪತ್ರಕರ್ತರ ಬಗ್ಗೆ ಕಾಳಜಿ ವಹಿಸಿ ಮಾಡುತ್ತಿರುವ ಕಾರ್ಯ ಶ್ಲಾಘನೀಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರಾಸ್ತವಿಕವಾಗಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಸದಸ್ಯರ ಕಾಳಜಿಯೂ ಸಹ ಪತ್ರಕರ್ತರ ಸಂಘಕ್ಕೆ ಮುಖ್ಯವಾಗಿ ಇರುವುದರಿಂದ ಸಂಘವು ಇಂತಹ ಕಾರ್ಯಚಟುವಟಿಕೆಗಳನ್ನು ಸತತವಾಗಿ ಹಮ್ಮಿಕೊಳ್ಳುತ್ತಿದೆ ಎಂದರು.
ರಾಜ್ಯ ಖಜಾಂಚಿ ಎಂ.ವಾಸುದೇವ ಹೊಳ್ಳ ಪ್ರಾರಂಭದಲ್ಲಿ ಸ್ವಾಗತಿಸಿದರು. ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ವಿ.ಮುನಿರಾಜು, ಬಿಬಿಎಂಪಿ ಆರೋಗ್ಯಾಧಿಕಾರಿ ಡಾ.ಶರಣಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ರಾಜ್ಯ ಸಮಿತಿ ಸದಸ್ಯರಾದ ಕೌಸಲ್ಯ ಫಳನಾಕರ್, ಕೆ. ಆರ್ .ದೇವರಾಜ್,ಮತ್ತು ನರೇಂದ್ರ ಪಾರೇಕಟ್, ಶಿವರಾಜ್ ಮತ್ತಿತರರು ಹಾಜರಿದ್ದರು. ನಂತರ ಆರೋಗ್ಯ ಸಚಿವರು, ಕೆಯುಡಬ್ಲ್ಯೂ ಜೆ ಕಾರ್ಯಾಲಯಕ್ಕೆ ಭೇಟಿ ನೀಡಿದ್ದರು. ಇದೇ ಸಂದರ್ಭದಲ್ಲಿ ಆರೋಗ್ಯ ತಪಾಸಣೆ ವೀಕ್ಷಿಸಿ ಮೆಚ್ಚಿಗೆಯ ಮಾತುಗಳನ್ನಾಡಿದರು. ಸೋಮಶೇಖರ್ ಗಾಂಧಿ ವಂದಿಸಿದರು.


