ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ನ್ಯಾಯಾಧೀಶರು ಹಾಗೂ ವಕೀಲರು ವಿಶೇಷ ಮುತಿವರ್ಜಿ ವಹಿಸಿ ನ್ಯಾಯಾಲಯದಲ್ಲಿನ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಬೇಕು ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ಬಿ.ವೀರಪ್ಪ ಹೇಳಿದರು.
ಪಟ್ಟಣದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ, ನೂತನವಾಗಿ ಸೃಜಿಸಲ್ಪಟ್ಟ ಸಂಚಾರಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯ ಉದ್ಘಾಟಿಸಿ ಮಾತನಾಡಿದ ಅವರು, ಪಟ್ಟಣದ ಹೊರ ವಲಯದಲ್ಲಿ ರೂ.15 ಕೋಟಿ ವೆಚ್ಚದಲ್ಲಿ ನೂತನ ನ್ಯಾಯಾಲಯ ಕಟ್ಟಡ ನಿರ್ಮಿಸಲಾಗುವುದು ಎಂದು ಹೇಳಿದರು.
ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಮಾತನಾಡಿ, ತಾಲ್ಲೂಕಿನ ಜನರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ. ಇದರಿಂದ ಕ್ಷಕಿದಾರರು ಜಿಲ್ಲಾ ಕೇಂದ್ರಕ್ಕೆ ಪ್ರಯಾಣಿಸುವುದು ತಪ್ಪುತ್ತದೆ. ಬಲಿಷ್ಟ ನ್ಯಾಯಾಂಗದಿಂದ ಮಾತ್ರ ಪ್ರಜಾಪ್ರಭುತ್ವ ಬಲಗೊಳ್ಳಲು ಸಾಧ್ಯ. ಜನ ಸಾಮಾನ್ಯರಿಗೆ ನ್ಯಾಯ ಸಿಗಬೇಕು. ಅದಕ್ಕೆ ಪೂರಕವಾಗಿ ನ್ಯಾಯಾಲಯಗಳು ನಡೆದುಕೊಳ್ಳಬೇಕು ಎಂದು ಹೇಳಿದರು.
ಶಾಸಕ ಕೆ.ಆರ್.ರಮೇಶ್ ಕುಮಾರ್ ಮಾತನಾಡಿ, ನ್ಯಾಯಾಂಗ ಸ್ವತಂತ್ರವಾಗಿದ್ದು ಸಂವಿಧಾನದ ಆಶಯಗಳನ್ನು ಜಾಗರೂಕತೆಯಿಂದ ಉಳಿಸುವಲ್ಲಿ ಯಶಸ್ವಿಯಾಗಿದೆ. ಸಂಕಷ್ಟದ ಸಂದರ್ಭಗಳಲ್ಲಿ ದೇಶವನ್ನು ಸಮರ್ಥವಾಗಿ ಉಳಿಸಿದೆ. ಆದ್ದರಿಂದಲೇ ಜನರು ನ್ಯಾಯಾಲಯಗಳ ಮೇಲೆ ನಂಬಿಕೆ ಇಟ್ಟಿದ್ದಾರೆ ಎಂದು ಹೇಳಿದರು.
ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎನ್.ಎಸ್.ಸಂಜಯ್ ಗೌಡ, ಪ್ರಧಾನ ಜಿಲ್ಲಾ ಮತು ಸತ್ರ ನ್ಯಾಯಾಧೀಶ ಕೆ.ಆರ್.ನಾಗರಾಜ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಕೆ.ಶಿವಪ್ಪ ಮಾತನಾಡಿದರು.
ಸ್ಥಳೀಯ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ಆರ್.ದೇವರಾಜ್, ಅಪರ ಸಿವಿಲ್ ನ್ಯಾಯಾಧೀಶ ನಾಗೇಶ್ ನಾಯಕ್, ನೂತನ ನ್ಯಾಯಾಲಯದ ನ್ಯಾಯಾಧೀಶ ಮಹೇಶ್ ಬಾಬು, ವಕೀಲರ ಸಂಘದ ಕಾರ್ಯದರ್ಶಿ ರೂಪ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ ಇದ್ದರು.