


ಕೋಲಾರ:- ಕರ್ನಾಟಕ ಸರ್ಕಾರದ ಸಚಿವ ಸಂಪುಟದಲ್ಲಿ ಹಿರಿಯ ರಾಜಕಾರಣಿ ಹಾಗೂ ಕೋಲಾರ ಜಿಲ್ಲೆಯ ಕಾಂಗ್ರೆಸ್ ಮುಖಂಡ ಕೆ.ಎಚ್. ಮುನಿಯಪ್ಪ ಅವರಿಗೆ ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿ ಜವಾಬ್ದಾರಿ ನೀಡಿರುವ ಹಿನ್ನೆಲೆಯಲ್ಲಿ, ಅವರ ಬೆಂಬಲಿಗರು ಹಾಗೂ ಕಾಂಗ್ರೆಸ್ ಮುಖಂಡರಿಂದ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ.
ಈ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಕೆ.ಎಚ್. ಮುನಿಯಪ್ಪ ಅವರ ಬೆಂಬಲಿಗರಾಗಿ ಗುರುತಿಸಿಕೊಂಡಿರುವ ಸಿ. ಲಕ್ಷ್ಮೀನಾರಾಯಣ, ಪಕ್ಷದ ಎಸ್ಸಿಘಟಕದ ಅಧ್ಯಕ್ಷ ಕೆ.ಜಯದೇವ್ ಮತ್ತಿತರರು ಬುಧವಾರ ಬೆಳಗ್ಗೆ ಸಚಿವ ಕೆ.ಎಚ್. ಮುನಿಯಪ್ಪ ಅವರ ನಿವಾಸಕ್ಕೆ ತೆರಳಿ ಶಾಲು ಹೊದಿಸಿ, ಫಲಪುಷ್ಪ ನೀಡಿ ಆತ್ಮೀಯವಾಗಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಿ. ಲಕ್ಷ್ಮೀನಾರಾಯಣ ಅವರು, ಹಿರಿಯ ನಾಯಕ ಕೆ.ಎಚ್. ಮುನಿಯಪ್ಪ ಅವರಿಗೆ ಸಮಾಜ ಕಲ್ಯಾಣ ಇಲಾಖೆಯಂತಹ ಮಹತ್ವದ ಜವಾಬ್ದಾರಿ ದೊರೆತಿರುವುದು ಕೋಲಾರ ಜಿಲ್ಲೆಯ ಜನತೆಗೆ ಹೆಮ್ಮೆಯ ಸಂಗತಿಯಾಗಿದೆ.
ದಶಕಗಳ ರಾಜಕೀಯ ಅನುಭವ ಹೊಂದಿರುವ ಅವರು, ಸಮಾಜದ ಹಿಂದುಳಿದ, ದುರ್ಬಲ ಹಾಗೂ ಶೋಷಿತ ವರ್ಗಗಳ ಕಲ್ಯಾಣಕ್ಕಾಗಿ ಮತ್ತಷ್ಟು ಪರಿಣಾಮಕಾರಿ ಕೆಲಸಗಳನ್ನು ಕೈಗೊಳ್ಳಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಸಂದರ್ಭದಲ್ಲಿ ಜನಪರವಾಗಿ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿರುವ ಮುನಿಯಪ್ಪ ಅವರಿಗೆ ಇದೀಗ ಸಮಾಜ ಕಲ್ಯಾಣ ಇಲಾಖೆಯ ಹೊಣೆಗಾರಿಕೆ ನೀಡಿರುವುದು ಅವರ ಆಡಳಿತಾತ್ಮಕ ಅನುಭವಕ್ಕೆ ಮತ್ತಷ್ಟು ಬಲ ನೀಡಿದಂತಾಗಿದೆ ಎಂದು ಅವರು ಹೇಳಿದರು.
ಕೋಲಾರ ಜಿಲ್ಲೆಯ ಅಭಿವೃದ್ಧಿ, ಸಾಮಾಜಿಕ ನ್ಯಾಯ ಹಾಗೂ ಬಡ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಸಚಿವರು ಹೆಚ್ಚಿನ ಆದ್ಯತೆ ನೀಡಬೇಕು. ಜಿಲ್ಲೆಯ ಜನರ ನಿರೀಕ್ಷೆಗಳಿಗೆ ಸ್ಪಂದಿಸಿ, ಸರ್ಕಾರದ ವಿವಿಧ ಜನಪರ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಲಕ್ಷ್ಮೀನಾರಾಯಣ ಆಶಿಸಿದರು.
ಈ ಸಂದರ್ಭದಲ್ಲಿ ಸಚಿವ ಕೆ.ಎಚ್. ಮುನಿಯಪ್ಪ ಅವರ ಅಭಿಮಾನಿಗಳು ಮತ್ತು ಬೆಂಬಲಿಗರಾದ ನಗರಸಭಾ ಮಾಜಿ ಉಪಾಧ್ಯಕ್ಷ ಎಸ್.ಆರ್.ಮುರಳಿಗೌಡ, ಕಾಂಗ್ರೆಸ್ ಜಿಲ್ಲಾ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್, ಅಹಿಂದ ಮಂಜುನಾರ್ತ ಮತ್ತಿತರರು ಹಾಜರಿದ್ದು, ಸಚಿವರಿಗೆ ಶುಭಾಶಯ ಸಲ್ಲಿಸಿದರು.
ಕೆ.ಎಚ್. ಮುನಿಯಪ್ಪ ಅವರಿಗೆ ಹೊಸ ಜವಾಬ್ದಾರಿ ದೊರೆತಿರುವುದು ಕೋಲಾರ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹಾಗೂ ಬೆಂಬಲಿಗರಲ್ಲಿ ಸಂತಸ ಮತ್ತು ಉತ್ಸಾಹ ಇಮ್ಮಡಿಗೊಳಿಸಿದ್ದು, ಜಿಲ್ಲೆಯಿಂದ ಪಕ್ಷದ ನೂರಾರು ಕಾರ್ಯಕರ್ತರು,ಮುಖಂಡರು ಭೇಟಿ ನೀಡಿ ಅಭಿನಂದಿಸಿದರು.

