ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಕನ್ನಡ ಪರ ಹಾಗೂ ಇತರ ಸಂಘ ಸಂಸ್ಥೆಗಳು ಶ್ರಮಿಸಬೇಕು ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಹೇಳಿದರು.
ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಸಂಬಂಧ ಸೋಮವಾರ ಏರ್ಪಡಿಸಿದ್ದ ವಿವಿಧ ಸಂಘ ಸಂಸ್ಥೆಗಳ ಸಭೆಯಲ್ಲಿ ಮಾತನಾಡಿದ ಅವರು, ಸಮ್ಮೇಳನ ಜ.16 ರಂದು ರೋಣೂರು ಗ್ರಾಮದಲ್ಲಿ ನಡೆದರೂ, ಅದು ಅರ್ಥಪೂರ್ಣವಾಗಿರಬೇಕು. ಯಾವುದೇ ಕುಂದು ಕೊರತೆ ಇರದಂತೆ ಸಂಘಟಕರು ನೋಡಿಕೊಳ್ಳಬೇಕು ಎಂದು ಹೇಳಿದರು.
ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಿ.ಎನ್.ಕುಬೇರಗೌಡ ಮಾತನಾಡಿ, ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಯಾರಿಂದಲೂ ಆರ್ಥಿಕ ನೆರವು ಪಡೆಯದಿರಲು ನಿರ್ಧರಿಸಲಾಗಿದೆ. ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ನಿಗದಿತ ಮೊತ್ತದ ಅನುದಾನ ಬಳಸಿಕೊಂಡು ಸಮ್ಮೇಳನ ನಡೆಸಲಾಗುವುದು. ವಿವಿಧ ಸಂಘ ಸಂಸ್ಥೆಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಹಾಗೂ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಭೆಯಲ್ಲಿ ಭಾಗವಹಿಸಿದ್ದ ಗಣ್ಯರಿಂದ ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಲಾಯಿತು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಚಲಪತಿ, ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.