ಬೆಂಗಳೂರು, ಜು.23-ಕಾರ್ಕಳ ಥೀಮ್ ಪಾರ್ಕ್ ಹಗರಣ ನಕಲಿ ಪರಶುರಾಮ ಮೂರ್ತಿ ಪ್ರತಿಷ್ಠಾಪನೆ ಹಿಂದು ಧರ್ಮದೇವರನ್ನು ಅವಮಾನ ಮಾಡಿದ ಹಾಗೂ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವ ಮಾಜಿ ಸಚಿವ ಹಾಗೂ ಶಾಸಕರಾದ ಪಿ ಸುನೀಲ್ ಕುಮಾರ್ ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಕೆಪಿಸಿಸಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಉಡುಪಿ ಜಿಲ್ಲಾ ಉಸ್ತುವಾರಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ನೇತ್ರತದಲ್ಲಿ ನಗರದ ಫ್ರೀಡಂ ಪಾರ್ಕ್ನಲ್ಲಿ ನಡೆದ ಪ್ರ ಪ್ರತಿಭಟನೆಯಲ್ಲಿ ಪರಶುರಾಮ ಥೀಮ್ ಪಾರ್ಕ್ ಹಗರಣದ ವಿರುದ್ಧ ಸೂಕ್ತ ಕಾನೂನುಕ್ರಮ ಕೈಗೊಳ್ಳಬೇಕು ಶಾಸಕ ಸುನೀಲ್ ಕುಮಾರ್ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಮುಖಂಡರು ನೀಡಿದರು,
ಹಿಂದಿನ ಬಿಜೆಪಿಯ ಅವದಿಯಲ್ಲಿ ಕಾರ್ಕಳದ ಬೈಲೂರು ಗ್ರಾಮದ ಹುಳಿಕಲ್ ಬೆಟ್ಟದ ಮೇಲೆ 15 ಕೋ. ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಪರಶುರಾಮ ಥೀಮ್ ಪಾರ್ಕ್ ಯೋಜನೆಯಲ್ಲಿ ಭಾರಿ ಅವ್ಯವಹಾರ ನಡೆದಿರುವುದು ದೃಢಪಟ್ಟಿದೆ. ಇಲ್ಲಿ ನಿರ್ಮಿಸಲಾಗಿರುವ 33 ಅಡಿ ಎತ್ತರದ ಪರಶುರಾಮ ಪ್ರತಿಮೆ ಕಂಚಿನದಲ್ಲ, ವಂಚನೆ ಮಾಡಿ ನಕಲಿ ವಿಗ್ರಹವನ್ನುಸ್ಥಾಪಿಸಲಾಗಿದೆ. ಈ ಅಕ್ರಮ ಮಾಡಿರುವ ಸುನೀಲ್ ಕುಮಾರ್ ಅವರು ರಾಜೀನಾಮೆ ನೀಡಬೇಕೆಂದು ಸಚಿವೆ ಲಕ್ಷ್ಮೀ ಹೆಬ್ಬಾಳರ್ ಅವರು ಆಗ್ರಹಿಸಿದರು.
ಕಾಂಗ್ರೆಸ್ ಪಕ್ಷದ ವಕ್ತಾರರಾದ ಸುಧೀರ್ ಕುಮಾರ್ ಮುರೋಳ್ಳಿ ಮಾತನಾಡಿ, ದೈವ ಗುರು ಪರಶುರಾಮರನ್ನು ಬಿಡದೇ ವಂಚಿಸಿದ ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರಿಗೆ ಬೇರೆಯವರ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಇಲ್ಲ. ತಮ್ಮ ಹುಳುಕುಗಳನ್ನು ಮುಚ್ಚಿಕೊಳ್ಳಲು ಬಿಜೆಪಿಯವರು ಸದನದಲ್ಲಿ ಅಬ್ಬರಿಸಿ ಬೊಬ್ಬಿರಿಯುತ್ತಾರೆ, ಪ್ರತಿಭಟನೆಗಳನ್ನು ಮಾಡುತ್ತಾರೆ. ಆದರೆ ತಮ್ಮ ತಟ್ಟೆಯಲ್ಲಿ ಕತ್ತೆ ಗಾತ್ರದ ಭ್ರಷ್ಟಾಚಾರ ಬಿದ್ದಿರುವುದು ಅವರ ಕಣ್ಣಿಗೆ ಕಾಣುತ್ತಿಲ್ಲ ಎಂದು ಹೇಳಿದರು.
ಮಾಜಿ ಸಚಿವರಾದ ರಮಾನಾಥ ರೈ, ವಿನಯ್ ಕುಮಾರ್ ಸೊರಕೆ, ಮಾಜಿ ಸಂಸದ ಜಯಪ್ರಕಾಶ್ ಹೆಗಡೆ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಯುವ ಮುಖಂಡ ರಕ್ಷಿತ್ ಶಿವರಾಮ್, ಉಡುಪಿ ಕಾರ್ಕಳ, ಬೈರದೂರು ದ.ಕ. ಭಾಗದ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.