

ಬೆಂಗಳೂರು : ಕೊಪ್ಪಳ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾದ ಹನುಮಂತಪ್ಪ ಹಳ್ಳಿಕೇರಿ ಅವರಿಗೆ ಆಸ್ಪತ್ರೆ ಚಿಕಿತ್ಸೆಗೆ ₹4 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಜೂರು ಮಾಡಿದ್ದಾರೆ.
ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರುವ ಹನುಮಂತಪ್ಪ ಹಳ್ಳಿಕೇರಿ ಅವರು ಚಿಕಿತ್ಸೆಗಾಗಿ ಹೆಚ್ಚಿನ ವೆಚ್ಚ ಎದುರಿಸುತ್ತಿದ್ದು, ಆರ್ಥಿಕ ನೆರವಿನ ಅಗತ್ಯವಿತ್ತು. ಈ ಹಿನ್ನೆಲೆಯಲ್ಲಿ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿ ಗಮನಕ್ಕೆ ವಿಷಯವನ್ನು ತಂದಿದ್ದು, ತಕ್ಷಣ ನೆರವು ನೀಡುವಂತೆ ಮನವಿ ಮಾಡಿದ್ದರು.
ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹4 ಲಕ್ಷ ಪರಿಹಾರ ಮಂಜೂರು ಮಾಡಿ ಮಾನವೀಯತೆ ತೋರಿದ್ದಾರೆ. ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅವರೂ ಈ ಪ್ರಕ್ರಿಯೆಯಲ್ಲಿ ಸಹಕರಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ) ಮುಖ್ಯಮಂತ್ರಿ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದೆ. ಹನುಮಂತಪ್ಪ ಹಳ್ಳಿಕೇರಿ ಅವರಿಗೆ ನೀಡಿದ ಈ ನೆರವು ಪತ್ರಕರ್ತರ ವಲಯದಲ್ಲಿ ಸಂತಸಕ್ಕೆ ಕಾರಣವಾಗಿದೆ.

