


ಬೆಂಗಳೂರು, ಜು. 8: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಕಾರ್ಯದರ್ಶಿಗಳಾಗಿ ನೇಮಕಗೊಂಡಿರುವ ಪಿ. ತ್ಯಾಗರಾಜ್, ಜಯಪ್ರಕಾಶ್ ಹಾಗೂ ರಾಘವೇಂದ್ರ ಭಟ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದೆ.
ಈ ಕುರಿತು ಪ್ರಕಟಣೆ ನೀಡಿರುವ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ನೂತನ ಮಾಧ್ಯಮ ಕಾರ್ಯದರ್ಶಿಗಳ ನೇಮಕವು ಸರ್ಕಾರ ಮತ್ತು ಮಾಧ್ಯಮಗಳ ನಡುವಿನ ಸಮನ್ವಯವನ್ನು ಮತ್ತಷ್ಟು ಬಲಪಡಿಸಲು ನೆರವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪತ್ರಕರ್ತರ ಸಮಸ್ಯೆಗಳಿಗೆ ಸ್ಪಂದಿಸುವುದು, ಮಾಧ್ಯಮ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾದ ಯೋಜನೆಗಳು ಹಾಗೂ ಕಲ್ಯಾಣ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಅವರು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂಬ ನಿರೀಕ್ಷೆ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಚೇರಿ ಮತ್ತು ಮಾಧ್ಯಮ ಪ್ರತಿನಿಧಿಗಳ ನಡುವೆ ಉತ್ತಮ ಸಂವಹನ ಹಾಗೂ ತ್ವರಿತ ಮಾಹಿತಿ ವಿನಿಮಯಕ್ಕೆ ನೂತನ ಮಾಧ್ಯಮ ಕಾರ್ಯದರ್ಶಿಗಳ ನೇಮಕ ಸಹಕಾರಿಯಾಗಲಿದೆ ಎಂದು ಅವರು ಹೇಳಿದರು. ಸರ್ಕಾರದ ಜನಪರ ಯೋಜನೆಗಳು, ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಆಡಳಿತದ ಪ್ರಮುಖ ನಿರ್ಧಾರಗಳು ಸಾರ್ವಜನಿಕರಿಗೆ ಪಾರದರ್ಶಕವಾಗಿ ಮತ್ತು ಸಮಯೋಚಿತವಾಗಿ ತಲುಪುವಲ್ಲಿ ಇವರ ಪಾತ್ರ ಮಹತ್ವದ್ದಾಗಿರಲಿದೆ ಎಂದು ತಿಳಿಸಿದರು.
ರಾಜ್ಯದ ಪತ್ರಕರ್ತರ ವೃತ್ತಿಪರ ಹಿತಾಸಕ್ತಿಗೆ ಆದ್ಯತೆ ನೀಡುವ ಜೊತೆಗೆ ಮಾಧ್ಯಮ ಕ್ಷೇತ್ರ ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರದೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸುವ ಮೂಲಕ ಪತ್ರಕರ್ತರ ವಿಶ್ವಾಸವನ್ನು ಗಳಿಸಲಿದ್ದಾರೆ ಎಂಬ ಭರವಸೆಯನ್ನೂ ಶಿವಾನಂದ ತಗಡೂರು ವ್ಯಕ್ತಪಡಿಸಿದರು.
ನೂತನ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಡಳಿತದಲ್ಲಿ ಸರ್ಕಾರ ಮತ್ತು ಮಾಧ್ಯಮಗಳ ನಡುವೆ ಮತ್ತಷ್ಟು ಉತ್ತಮ ಬಾಂಧವ್ಯ ನಿರ್ಮಿಸುವಲ್ಲಿ ಮೂವರು ಮಾಧ್ಯಮ ಕಾರ್ಯದರ್ಶಿಗಳು ಮಹತ್ವದ ಪಾತ್ರ ವಹಿಸಲಿದ್ದಾರೆ ಎಂದು ಕೆಯುಡಬ್ಲ್ಯೂಜೆ ಶುಭ ಹಾರೈಸಿದೆ.





