ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ಯಾವುದೇ ಒತ್ತಡಕ್ಕೆ ಮಣಿಯದೆ ಕೆರೆ ಒತ್ತುವರಿ ತೆರವುಗೊಳಿಸಲಾಗುವುದು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ತಾಲ್ಲೂಕಿನ ಅರಿಕೆರೆ ಗ್ರಾಮದ ಸಮೀಪ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಸ್ಥಳೀಯ ಕೆರೆ ಬಳಗ ಸಂಘದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಚೌಡೇಶ್ವರಿ ಅಮ್ಮನವರ ಕೆರೆ ಹೂಳೆತ್ತುವ ಹಾಗೂ ಕಟ್ಟೆ ಅಭಿವೃದ್ಧಿ ಕಾಮಗಾರಿ ಉದ್ಘಾಟಿಸಿ ಮಾತನಾಡಿದ ಅವರು, ಬದಲಾದ ಪರಿಸ್ಥಿತಿಯಲ್ಲಿ ಕೆರೆ ಹೂಳು ತೆಗೆಯುವ ಹಾಗೂ ಕಟ್ಟೆ ದುರಸ್ತಿ ಕಾರ್ಯಕ್ಕೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಗ್ರಾಮದ ಕೆರೆ ಅಭಿವೃದ್ಧಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ರೂ.14 ಲಕ್ಷ ವೆಚ್ಚಮಾಡಲಾಗುತ್ತಿದೆ. ಈ ಹಣದಿಂದ ಪೂರ್ಣಪ್ರಮಾಣದಲ್ಲಿ ಕಾಮಗಾರಿ ಕೈಗೊಳ್ಳಲು ಸಾಧ್ಯವಾಗುವುದಿಲ್ಲ. ಸಂಬಂಧಪಟ್ಟ ಇಲಾಖೆಯಿಂದ ಇನ್ನಷ್ಟು ನೆರವು ಕೊಡಿಸಲಾಗುವುದು. ಕೆರೆಗೆ ನೀರು ಬರಲು ಇರುವ ಅಡ್ಡಿಯನ್ನು ನಿವಾರಿಸಲಾಗುವುದು ಎಂದು ಹೇಳಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಜೆ.ಚಂದ್ರಶೇಖರ್ ಮಾತನಾಡಿ, ರಾಜ್ಯದಲ್ಲಿ ನಮ್ಮ ಊರು ನಮ್ಮ ಕೆರೆ ಯೋಜನೆಯಡಿ 262 ಕೆರೆಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಜಿಲ್ಲೆಯಲ್ಲಿ 21 ಕೆರೆಗಳ ಅಭಿವೃದ್ಧಿ ಕೈಗೊಳ್ಳಲಾಗಿದೆ. ಆ ಪೈಕಿ ತಾಲ್ಲೂಕಿನಲ್ಲಿ 4 ಕೆರೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಪಿಡಿಒ ಜಗದೀಶ್ ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರಾದ ಸುರೇಶ ಬಾಬು, ಜಗದೀಶ್, ಹರೀಶ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸುಧಾಕರ್, ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎ.ವಿ.ರಾಮನಾಥ್, ಮುಖಂಡರಾದ ಅರುಣ್ ಕುಮರ್, ಅಶೋಕ್, ರಮೇಶ್, ವೆಂಕಟರವಣಪ್ಪ ಇದ್ದರು.