

ಕೋಲಾರ:- ಮನುಷ್ಯನ ಜೀವನದಲ್ಲಿ ಇಂದು ಆಹಾರ,ನೀರಿನಷ್ಟೇ ಕಾನೂನು ಅತಿ ಮುಖ್ಯವಾಗಿದ್ದು, ದೈನಂದಿನ ಬದುಕಿಗೆ ಅಗತ್ಯವಾದ ಕನಿಷ್ಟ ಕಾನೂನುಗಳ ಅರಿವು ಅಗತ್ಯವಿದೆ, ನಿಮ್ಮ ಪೋಷಕರ ಆಶಯ ಈಡೇರಿಕೆ ನಿಮ್ಮ ಜವಾಬ್ದಾರಿ ಎಂಬುದನ್ನು ಅರಿತು ಹಕ್ಕುಗಳನ್ನು ಕೇಳುವುದರ ಜತೆಗೆ ಕರ್ತವ್ಯ ಪಾಲನೆಯೂ ಮುಖ್ಯ ಎಂಬುದನ್ನು ವಿದ್ಯಾರ್ಥಿನಿಯರು ಅರಿಯಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸುನೀಲ್ ಎಸ್.ಹೊಸಮನಿ ಕರೆ ನೀಡಿದರು.
ನಗರದ ಕೋಲಾರದ ಕೋರ್ಟ್ ವೃತ್ತದಲ್ಲಿನ ಅಂಬೇಡ್ಕರ್ ವಿದ್ಯಾರ್ಥಿ ನಿಲಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಮಾಜಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.
ಮನುಷ್ಯ ಭ್ರೂಣದಿಂದ ಸಾಯುವವರೆಗೂ ಕಾನೂನಿನ ಅಡಿಯೇ ಬದುಕಬೇಕಾಗಿದೆ, ಕಾನೂನು ಪಾಲಿಸುವವರನ್ನು ಕಾನೂನು ರಕ್ಷಿಸುತ್ತದೆ ಎಂದ ಅವರು, ಇತ್ತೀಚೆಗೆ ಭ್ರೂಣಲಿಂಗ ಪತ್ತೆ, ಹೆಣ್ಣುಭ್ರೂಣ ಹತ್ಯೆಯಂತಹ ಅಪರಾಧಗಳು ಹೆಚ್ಚಾಗುತ್ತಿದ್ದು, ಇದರ ವಿರುದ್ದ ನೀವು ಧ್ವನಿಯೆತ್ತಬೇಕು, ಪೊಲೀಸರಿಗೆ ತಿಳಿಸಬೇಕು ಎಂದರು.
ಸಮಾಜಕ್ಕೆ ಹಾಗೂ ಯುವಪೀಳಿಗೆಗೆ ಕಂಟಕವಾಗಿರುವ ಮಾದಕ ವ್ಯಸನದಿಂದ ದೂರ ಮಾಡಲು ವಿದ್ಯಾರ್ಥಿಗಳಿಗೆ ಅರಿವು ನೀಡುವ ಕೆಲಸ ಮಾಡುತ್ತಿದ್ದು, ಕಾಲೇಜಿನ ಆವರಣದಲ್ಲಿ ಅಥವಾ ಎಲ್ಲೇ ಆಗಲಿ ಮಾದಕ ವಸ್ತುಗಳ ಸಾಗಾಣೆ, ಮಾರಾಟ ಕಂಡು ಬಂದರೆ ಪೊಲೀಸರಿಗೆ ದೂರು ನೀಡಿ ಎಂದು ಕಿವಿಮಾತು ಹೇಳಿದರು.
ಗಲ್ಪೇಟೆ ಪಿಎಸ್ಐ ವಿದ್ಯಾಶ್ರೀ ಮಾತನಾಡಿ, ತಂಬಾಕು,ಮಾದಕ ವಸ್ತು ನಿಯಂತ್ರಣಕ್ಕೆ ಕೋಟ್ಟಾ ಸಿಗರೇಟು ಹಾಗೂ ಇತರೆ ತಂಬಾಕು ಉತ್ಪನ್ನಗಳ ಕಾಯಿದೆ ಜಾರಿಯಲ್ಲಿದ್ದು, 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನ ಮಾರಾಟ ಮಾಡುವುದ ಅಪರಾಧವಾಗಿದೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದರು.
ಶಾಲಾ ಕಾಲೇಜುಗಳಿಂದ 200 ಮೀಟರ್ ಅಂತರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಸದರಿ ಕಾಯಿದೆಯಡಿ ನಿಷೇಧಿಸಲಾಗಿದ್ದು, ಪ್ರತಿ ಶಾಲೆ,ಕಾಲೇಜು ಬಳಿ ನಿಷೇಧದ ಕುರಿತು ನಾಮಫಲಕ ಹಾಕುವುದು ಕಡ್ಡಾಯವಾಗಿದೆ ಎಂದರು.
ಕಾನೂನಿನ ಅರಿವಿಲ್ಲದೇ ಅಪರಾಧ ಮಾಡಿದರೂ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದ ಅವರು, ನಿತ್ಯ ಜೀವನದಲ್ಲಿ ಅಗತ್ಯವಾದ ಕಾನೂನುಗಳ ಅರಿವು ಇದ್ದರೆ ನೆಮ್ಮದಿಯ ವಿವಾದ ರಹಿತ ಜೀವನ ನಡೆಸಬಹುದು ಎಂದರು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಚನ್ನಬಸಪ್ಪ ಮಾತನಾಡಿ,ಬಾಲ್ಯವಿವಾಹ ಸಮಾಜಕ್ಕೆ ಕಂಟಕವಾಗಿದೆ ಎಂದ ಅವರು ಇದರ ಸಂಪೂರ್ಣ ತಡೆಗೆ ವಿದ್ಯಾರ್ಥಿ ಸಯುದಾಯದ ಸಹಕಾರ ಅಗತ್ಯವಿದೆ, ನಿಮ್ಮ ಸುತ್ತಮುತ್ತ ಬಾಲ್ಯವಿವಾಹ ಆಗುತ್ತಿದ್ದರೆ ನೀವು ಕೂಡಲೇ 1098 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಬಹುದು, ನಿಮ್ಮ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದರು.
ಭ್ರೂಣ ಲಿಂಗ ಪತ್ತೆ ಮಾಡುವುದು ಸಹಾ ಅಪರಾಧವಾಗಿದ್ದು,ಕಠಿಣ ಶಿಕ್ಷೆ ಇದೆ, ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೂ ಸರ್ಕಾರ ಕಾನೂನು ಮಾಡಿದ್ದು, ಇದರ ಕುರಿತು ನೀವು ಅರಿತು ಸಮಾಜಕ್ಕೂ ತಿಳಿಸಿಕೊಡಿ ಎಂದರು.
ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಕ್ಕಳ ಸಹಾಯವಾಣಿಯ ಕುರಿತು ಅರಿವು ನೀಡಿದ್ದು, ಲಿಂಗ ಪತ್ತೆ ನಿಷೇಧ ಕಾಯಿದೆ, ಬಾಲ್ಯವಿವಾಹ ನಿಷೇಧ, ಹೆಣ್ಣು ಭ್ರೂಣ ಹತ್ಯೆ ಕಾಯಿದೆ, ಬಾಲಕಾರ್ಮಿಕ ನಿಷೇಧ, ಹಾಗೂ ಮೋಟಾರ್ ವಾಹನ ಕಾಯಿದೆಗಳ ಕುರಿತು ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಎನ್ಎಎಲ್ಎಸ್ಎ ಸಹಾಯವಾಣಿ 15100 ಕುರಿತು ಮಾಹಿತಿ ನೀಡಲಾಯಿತು, ವಿದ್ಯಾರ್ಥಿನಿಯರಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಈ ಸಂದರ್ಭದಲ್ಲಿ ಹಾಸ್ಟೆಲ್ ಮೇಲ್ವಿಚಾರಕಿ ಶೋಭಾ, ವೃತ್ತಿಪರ ತರಬೇತಿ ವಿದ್ಯಾರ್ಥಿನಿಲಯದ ಮೇಲ್ವಿಚಾರಕಿ ಮಾಲಾಶ್ರೀ ಮತ್ತಿತರರಿದ್ದು, 150ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಇದರ ಪ್ರಯೋಜನ ಪಡೆದುಕೊಂಡರು.