ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ಮಾವಿನ ವಹಿವಾಟು ಮಾಡುವ ವರ್ತಕರು ಹಾಗೂ ಮಂಡಿ ಮಾಲೀಕರು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.
ಪಟ್ಟಣದ ಎಪಿಎಂಸಿ ಮಾರುಟ್ಟೆ ಸಭಾಂಗಣದಲ್ಲಿ ಏರ್ಪಡಿಸಿದ್ದ ಮಾವು ವರ್ತಕರ ಸಭೆಯಲ್ಲಿ ಮಾತನಾಡಿದ ಅವರು, ವರ್ತಕರು ಕಡ್ಡಾಯವಾಗಿ ಪರವಾನಗಿ ನವೀಕರಿಸಿಕೊಳ್ಳಬೇಕು. ಪ್ರಾಂಗಣದಲ್ಲಿ ಸ್ವಚ್ಛತೆ ಕಾಪಾಡಬೇಕು. ವರ್ತಕರು ಹಾಗೂ ಮಂಡಿ ಕಾರ್ಮಿಕರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕು. ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಹೇಳಿದರು.
ಸದೃಢ ಕೂಲಿಕಾರರನ್ನು ಮಾತ್ರ ಮಾವಿನ ಮಂಡಿಗಳಲ್ಲಿ ನೇಮಿಸಿಕೊಳ್ಳಬೇಕು. 18 ವರ್ಷಕ್ಕಿಂತ ಕೆಳಗಿನ ಹಾಗೂ 60 ವರ್ಷ ಮೇಲ್ಪಟ್ಟ ವ್ಯಕ್ತಿಗಳನ್ನು ನೇಮಿಸಿಕೊಳ್ಳಬಾರದು. ವರ್ತಕರು ಮತ್ತು ಕೂಲಿಕಾರರ ಪೂರ್ಣ ಮಾಹಿತಿಯನ್ನು ಹಾಜರಾತಿ ಪುಸ್ತಕದಲ್ಲಿ ನಮೂದಿಸಬೇಕು. ಅವರಿಗೆ ದಿನಕ್ಕೆ ಎರಡು ಬಾರಿ ಆಮ್ಲಜನಕದ ಮಟ್ಟ ಹಾಗೂ ದೇಹದ ಉಷ್ಣಾಂಶ ಪರೀಕ್ಷೆ ಮಾಡಿ ನಮೂದಿಸಬೇಕು ಎಂದು ಸೂಚಿಸಿದರು.
ಮಾವಿನ ಮಂಡಿಗಳಲ್ಲಿ ಆದಷ್ಟೂ ಕಡಿಮೆ ಸಿಬ್ಬಂದಿ ಇರಬೇಕು ಹಾಗೂ ಅವರು ಆರೋಗ್ಯವಂತರಾಗಿರಬೇಕು. ಅವರಿಗೆ ಪೊಲೀಸ್ ಇಲಾಖೆ ವತಿಯಿಂದ ಭಾವ ಚಿತ್ರವಿರುವ ದೃಢೀಕೃತ ಗುರುತಿನ ಚೀಟಿ ಪಡೆದು ವಿತರಿಸಬೇಕು ಎಂದು ಹೇಳಿದರು.
ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಜಿಲ್ಲಾ ತೊಟಗಾರಿಕೆ ಇಲಾಖೆಯ ಉಪ ನಿರ್ದೇಶಕಿ ಗಾಯತ್ರಿ, ಹಿರಿಯ ಸಹಾಯಕ ನಿರ್ದೇಶಕ ಎಂ.ಶ್ರೀನಿವಾಸ್, ಪುರಸಭೆ ಮುಖ್ಯಾಧಿಕಾರಿ ಡಿ.ಶೇಖರರೆಡ್ಡಿ, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಪೊಲೀಸ್ ಇನ್ಸ್‍ಪೆಕ್ಟರ್ ಸಿ.ರವಿಕುಮಾರ್, ಎಪಿಎಂಸಿ ಅಧ್ಯಕ್ಷ ಜಿ.ಕೆ.ರಾಜಣ್ಣ, ಕಾರ್ಯದರ್ಶಿ ವೇಣು, ಜಿಲ್ಲಾ ಮಾವು ಬೆಳೆಗಾರರ ಸಂಘದ ಅಧ್ಯಕ್ಷ ನೀಲಟೂರು ಚಿನ್ನಪ್ಪರೆಡ್ಡಿ, ನಾಗೇಶ್ ಇದ್ದರು.
ಭೇಟಿ: ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್ ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸೆ ಹಾಗೂ ವ್ಯವಸ್ಥೆಯನ್ನು ಪರಿಶೀಲಿಸಿದರು.