

ಶ್ರೀನಿವಾಸಪುರ : ಓಂ ಶ್ರೀ ಮಂಜುನಾಥಾಯ ನಮ ಎಂಬ ಭಕ್ತಿಭಾವದೊಂದಿಗೆ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಧರ್ಮಪತ್ನಿ ಮಾತೃಶ್ರೀ ಡಾ. ಹೇಮಾವತಿ ವಿ. ಹೆಗ್ಗಡೆಯವರ ಹುಟ್ಟುಹಬ್ಬವನ್ನು ಶ್ರೀನಿವಾಸಪುರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ರಾಜ್ಯದ ಲಕ್ಷಾಂತರ ಮಹಿಳೆಯರ ಸಬಲಿಕರಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿರುವ ಮಾತೃಶ್ರೀ ಹೇಮಾವತಿ ಅಮ್ಮನವರು, ನೊಂದವರು, ನಿರ್ಗತಿಕರು ಹಾಗೂ ಆಶ್ರಯವಿಲ್ಲದವರಿಗೆ ಆಶಾಕಿರಣವಾಗಿ ಪರಿಣಮಿಸಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಮಾಸಿಕ ರೂ.1000 ರಿಂದ ರೂ.3000ರವರೆಗೆ ನೆರವು ನೀಡಿ ಅನೇಕ ಕುಟುಂಬಗಳ ಬದುಕಿಗೆ ಆಧಾರವಾಗಿದ್ದಾರೆ.
ಹುಟ್ಟುಹಬ್ಬದ ಅಂಗವಾಗಿ ಶ್ರೀನಿವಾಸಪುರ-2 ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಒಟ್ಟು 50 ಮಂದಿ ಮಾಶಾಸನ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿ ಶ್ರೀ ಕಾಂತಪ್ಪ, ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಸುಧಾಮಣಿ, ವಿವಿಧ ವಲಯಗಳ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಸ್ಥಳೀಯ ಗಣ್ಯರು, ಒಕ್ಕೂಟದ ಪದಾಧಿಕಾರಿಗಳು ಹಾಗೂ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.



