ಶ್ರೀನಿವಾಸಪುರ: ವಿಧಾನ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸುತ್ತದೆ. ಪ್ರತಿಯೊಬ್ಬರೂ ಸಂವಿಧಾನದ ಆಶಯದಂತೆ ನಡೆದುಕೊಳ್ಳಬೇಕು ಎಂದು ಜೆಎಂಎಫ್ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಬಿ.ಕೆ.ಮನು ಹೇಳಿದರು.
ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ ಏರ್ಪಡಿಸಿದ್ದ ಸಂವಿಧಾನ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ನಮ್ಮ ಸಂವಿಧಾನ ಮಾನವತಾವಾದಿ ಡಾ. ಬಿ.ಆರ್.ಅಂಬೇಡ್ಕರ್ ಅವರ ದೂರದೃಷ್ಟಿಯ ಫಲವಾಗಿದೆ. ಪ್ರಜೆಗಳು ಸಂವಿಧಾನ ನೀಡಿರುವ ಹಕ್ಕುಗಳನ್ನು ಅನುಭವಿಸುವುರ ಜತೆಗೆ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದು ಹೇಳಿದರು.
ಸಂವಿಧಾನ ವಿವಿಧತೆಯಲ್ಲಿ ಏಕತೆ ಸಾಧಿಸಿರುವ ದೇಶದ ಜನರ ಬದುಕಿಗೆ ಮಾರ್ಗದರ್ಶನ ಮಾಡುತ್ತದೆ. ಪ್ರತಿಯೊಬ್ಬರೂ ಸಂವಿಧಾನ ತತ್ವ ಪಾಲಿಸುವ ಬಗ್ಗೆ ಪ್ರತಿಜ್ಞೆ ಮಾಡಬೇಕು ಎಂದು ಹೇಳಿದರು.
ಶಿಕ್ಷಕ ರಾಮಾಜನೇಯಪ್ಪ ಸಾಂವಿಧಾನದ ಮಹತ್ವ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರಿಗೆ ಸಂವಿಧಾನದ ಪ್ರಸ್ತಾವನೆಯ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಭಾಗ್ಯಲಕ್ಷ್ಮಿ, ಉಪ ಪ್ರಾಂಶುಪಾಲ ಎನ್.ಶ್ರೀಧರ್, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಜಯರಾಮೇಗೌಡ, ತಾಲ್ಲೂಕು ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸುಬ್ರಮಣಿ, ತಾಲ್ಲೂಕು ದೈಹಿಕ ಶಿಕ್ಷಣ ವಿಷಯ ಪರಿವೀಕ್ಷಕ ವೆಂಕಟಸ್ವಾಮಿ, ಮುನಿವೆಂಕಟರೆಡ್ಡಿ, ಶಾರದಮ್ಮ ಇದ್ದರು.