

ಕೋಲಾರ : ಸರ್ಕಾರದ ಸೌಲಭ್ಯಗಳು ವಿಳಂಬವಿಲ್ಲದೆ ಜನರಿಗೆ ತಲುಪಬೇಕು. ಸಾರ್ವಜನಿಕರ ಕೆಲಸಗಳಿಗೆ ಸ್ಪಂದಿಸದೆ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಠಿಣ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ಇಂದು ಕೆಜಿಎಫ್ ನಗರಸಭೆ ಆವರಣದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಗಳ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯ ಅಭಾವ ಇರುವ ಹಿನ್ನೆಲೆಯಲ್ಲಿ ಜಿಲ್ಲೆಯ ಯಾವುದೇ ಭಾಗದಲ್ಲೂ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಬಾರದು ಎಂಬುದು ಸರ್ಕಾರದ ಸ್ಪಷ್ಟ ಆದೇಶವಾಗಿದೆ ಎಂದು ತಿಳಿಸಿದರು.
ನೀರಿನ ಸಮಸ್ಯೆ ತೀವ್ರವಾಗಬಹುದಾದ ವಾರ್ಡ್ಗಳನ್ನು ಗುರುತಿಸಿ ತಕ್ಷಣವೇ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸಮಗ್ರ ಕ್ರಿಯಾ ಯೋಜನೆ ಸಿದ್ಧಪಡಿಸಬೇಕು ಎಂದು ಸೂಚಿಸಿದರು. ನೀರಿನ ಮೂಲಗಳಿಲ್ಲದ ಪ್ರದೇಶಗಳಲ್ಲಿ ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆಗೆ ಪಡೆಯುವುದು ಅಥವಾ ಟ್ಯಾಂಕರ್ಗಳ ಮೂಲಕ ಸಮರ್ಪಕ ನೀರು ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಾರ್ವಜನಿಕರು ನೀರಿನ ಸಮಸ್ಯೆ ಕುರಿತು ದೂರು ನೀಡಿದ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ತಾಕೀತು ಮಾಡಿದರು. ಜಿಲ್ಲೆಯಲ್ಲಿ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳ ಕುರಿತು ಚರ್ಚಿಸಿ, ಅನುದಾನದ ಬಳಕೆ ಮತ್ತು ಕಾಮಗಾರಿಗಳ ಗುಣಮಟ್ಟದ ಬಗ್ಗೆ ಸಚಿವರು ಮಾಹಿತಿ ಪಡೆದರು.
ಕುಡಿಯುವ ನೀರು, ರಸ್ತೆ ಸಂಪರ್ಕ ಮತ್ತು ಒಳಚರಂಡಿ ವ್ಯವಸ್ಥೆಗಳಿಗೆ ಮೊದಲ ಆದ್ಯತೆ ನೀಡಬೇಕು. ಸರ್ಕಾರ ಬಿಡುಗಡೆ ಮಾಡಿರುವ ಅನುದಾನವನ್ನು ಯುದ್ಧೋಪಾದಿಯಲ್ಲಿ ಸದ್ಬಳಕೆ ಮಾಡಿಕೊಂಡು ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಅಧಿಕಾರಿಗಳು ಕಚೇರಿಗಳಲ್ಲೇ ಸೀಮಿತರಾಗದೆ, ಕ್ಷೇತ್ರ ಮಟ್ಟದಲ್ಲಿ ಕಾರ್ಯನಿರ್ವಹಿಸಿ ಜನರ ವಿಶ್ವಾಸ ಗಳಿಸಬೇಕು ಎಂದು ಸಚಿವರು ಸೂಚಿಸಿದರು.
ಈ ಸಂದರ್ಭದಲ್ಲಿ ಕೆಜಿಎಫ್ ಶಾಸಕಿ ರೂಪಕಲಾ ಎಂ. ಶಶಿಧರ್ ಅವರು ಗಣಿ ನಾಡಿನ ಜನರು ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು. ಜೊತೆಗೆ ಕ್ಷೇತ್ರದ ಹೊಸ ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ, ಸಚಿವರ ಆಪ್ತ ಕಾರ್ಯದರ್ಶಿ ಡಾ. ಮುರಳೀಧರ, ಪೌರಾಡಳಿತ ನಿರ್ದೇಶನಾಲಯದ ಬಸವರಾಜು, ಜಂಟಿ ನಿರ್ದೇಶಕ ಕೃಷ್ಣಮೂರ್ತಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸ, ತಹಶೀಲ್ದಾರ್ ಭರತ್ ಸೇರಿದಂತೆ ವಿವಿಧ ನಗರಸಭೆಗಳ ಆಯುಕ್ತರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.





