

ಶ್ರೀನಿವಾಸಪುರ : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಯದರೂರು ಗ್ರಾಮದ ಸರ್ಕಾರಿ ಉರ್ದು ಶಾಲೆಯ ಅಡುಗೆ ಕೊಠಡಿ ಅತ್ಯಂತ ಶಿಥಿಲಾವಸ್ಥೆಯಲ್ಲಿದ್ದು, ಯಾವುದೇ ಕ್ಷಣದಲ್ಲಿ ಅನಾಹುತ ಸಂಭವಿಸುವ ಆತಂಕ ಇದೆ ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ ಎಚ್ಚರಿಕೆ ನೀಡಿದೆ.
ಅಡುಗೆ ಕೊಠಡಿಯ ಮೇಲ್ಛಾವಣಿಯಿಂದ ಸಿಮೆಂಟ್ ತುಂಡುಗಳು ಉದುರುತ್ತಿದ್ದು, ಮಕ್ಕಳ ಹಾಗೂ ಅಡುಗೆ ಸಿಬ್ಬಂದಿಯ ಜೀವಕ್ಕೆ ಅಪಾಯ ಎದುರಾಗಿರುವ ಬಗ್ಗೆ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಜಿಲ್ಲಾ ಸಮಿತಿ ಸದಸ್ಯ ಶಬ್ಬೀರ್ ಅಹ್ಮದ್ ಅವರು ಆಯೋಗಕ್ಕೆ ಮನವಿ ಸಲ್ಲಿಸಿದ್ದರು. ಛಾಯಾಚಿತ್ರಗಳೊಂದಿಗೆ ಸಲ್ಲಿಸಿದ ಮನವಿಯನ್ನು ಪರಿಗಣಿಸಿದ ಆಯೋಗ, ಸಂಬಂಧಪಟ್ಟ ಅಧಿಕಾರಿಗಳು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದೆ.
ಈ ಕುರಿತು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು (ಆಡಳಿತ), ಕೋಲಾರ ಅವರಿಗೆ ಪತ್ರ ಬರೆದಿರುವ ಆಯೋಗ, ಕೈಗೊಂಡ ಕ್ರಮಗಳ ಕುರಿತು ಏಳು ದಿನಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಿದೆ. ಮಕ್ಕಳ ಸುರಕ್ಷತೆ ವಿಷಯದಲ್ಲಿ ನಿರ್ಲಕ್ಷ್ಯ ಸಹಿಸಲಾಗುವುದಿಲ್ಲ ಎಂದು ಆಯೋಗ ಸ್ಪಷ್ಟಪಡಿಸಿದೆ.
ಕೋಲಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಶ್ರೀನಿವಾಸಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಶಾಲೆಯ ಮುಖ್ಯೋಪಾಧ್ಯಾಯರಿಗೆ ಅಗತ್ಯ ಕ್ರಮಕ್ಕಾಗಿ ಪ್ರತಿಯನ್ನು ಕಳುಹಿಸಲಾಗಿದೆ.




