ಶ್ರೀನಿವಾಸಪುರ: ಅಧಿಕಾರಿಗಳು ಸರ್ಕಾರದ ಸೌಲಭ್ಯಗಳನ್ನು ಪಕ್ಷಾತೀತವಾಗಿ ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.
ಹೊಗಳಗೆರೆ ತೋಟಗಾರಿಕಾ ಕ್ಷೇತ್ರದ ಸಭಾಂಗಣದಲ್ಲಿ ಏರ್ಪಡಿಸಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ನಿವೇಶನ ರಹಿತ ಕುಟುಂಬಳ ಪಟ್ಟಿ ತಯಾರಿಸಬೇಕು ಎಂದು ಹೇಳಿದರು.
ಕ್ಷೇತ್ರದಲ್ಲಿ ಕುಡಿಯುವ ನೀರು ಪೂರೈಕೆ, ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಆದ್ಯತೆ ನೀಡಬೇಕು. ಪಟ್ಟಣ ಹಾಗೂ ಗ್ರಾಮಗಳಲ್ಲಿ ನೈರ್ಮಲ್ಯ ಪಾಲನೆ ಮಾಡಬೇಕು. ಚರಂಡಿಗಳಿಂದ ನಾಗರಿಕ ಆರೋಗ್ಯ ಕೆಡದಂತೆ ಎಚ್ಚರ ವಹಿಸಬೇಕು. ನಿಯಮಿತವಾಗಿ ಕಸ ವಿಲೇವಾರಿ ಮಾಡಬೇಕು ಎಂದು ಹೇಳಿದರು.
ರೂ.25 ಕೋಟಿ ವೆಚ್ಚದಲ್ಲಿ ಶ್ರೀನಿವಾಸಪುರ ಅಭಿವೃದ್ಧಿ ಕೈಗೊಳ್ಳಲಾಗುವುದು. ಪಟ್ಟಣದ ಸುತ್ತ 10 ಕಿ.ಮೀ ಸಿಸಿ ರಸ್ತೆ ನಿರ್ಮಿಸಲಾಗುವುದು. ಪಟ್ಟಣದ ಅಂಚಿನಲ್ಲಿರುವ ಅಮಾನಿಕೆರೆ ಅಭಿವೃದ್ಧಿ ಕೈಗೊಳ್ಳಲಾಗುವುದು. ಕಟ್ಟೆ ದುರಸ್ತಿ ಮಾಡಿ, ದೋಣಿ ವಿಹಾರ ವ್ಯವಸ್ಥೆ ಮಾಡಲಾಗುವುದು. ಈ ಬಗ್ಗೆ ಕಾರ್ಯಯೋಜನೆ ರೂಪಿಸಿ ಜಾರಿಗೊಳಿಸಲಾಗುವುದು ಎಂದು ಹೇಳಿದರು.
ಪಟ್ಟಣದ ಹೊರವಲಯದಲ್ಲಿ ರೂ.15 ಕೋಟಿ ವೆಚ್ಚದಲ್ಲಿ ನೂತನ ಜೆಎಂಎಫ್ಸಿ ನ್ಯಾಯಾಲಯ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಗುಣಮಟ್ಟ ಚೆನ್ನಾಗಿರುವಂತೆ ನೋಡಿಕೊಳ್ಳಬೇಕು. ಡಿ.15 ರೊಳಗೆ ಹದಗೆಟ್ಟಿರುವ ಗ್ರಾಮೀಣ ರಸ್ತೆಗಳ ದುರಸ್ತಿ ಕಾರ್ಯ ಮುಗಿಸಬೇಕು. ಶಾಲೆಗಳಿಗೆ ಕುಡಿಯುವ ನೀರು, ಕಾಂಪೌಂಡ್ ಸೇರಿದಂತೆ ಅಗತ್ಯವಿರುವ ಮೂಲ ಸೌಕರ್ಯ ಒದಗಿಸಬೇಕು.
ವಿದ್ಯಾರ್ಥಿ ನಿಲಯಗಳಲ್ಲಿ ಗುಣಮಟ್ಟದ ಆಹಾರ ನೀಡಬೇಕು. ಓದಲು ಪೂರಕ ವಾತಾವರಣ ನಿರ್ಮಾಣ ಮಾಡಬೇಕು. ಅನಗತ್ಯ ವ್ಯಕ್ತಿಗಳ ಪ್ರವೇಶ ತಡೆಯಬೇಕು. ಉತ್ತಮ ಫಲಿತಾಂಶ ಬರಲು ಅಗತ್ಯವಾದ ಎಲ್ಲ ಕ್ರಮ ಕೈಗೊಳ್ಳಬೇಕು. ಹಾಸ್ಟೆಲ್ ವ್ಯವಸ್ಥಾಪಕರು ಈ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಹೇಳಿದರು.
ತಹಶೀಲ್ದಾರ್ ಜಿ.ಎನ್.ಸುಧೀಂದ್ರ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಶಿವಕುಮಾರಿ, ವಿವಿಧ ಇಲಾಖೆಗಳ ಮುಖ್ಯಸ್ಥರು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇದ್ದರು.