

ಬೆಂಗಳೂರು: ಜೂ. 4ರಂದೇ ಮುಂಗಾರು ಪ್ರವೇಶ ಸಾಧ್ಯತೆ ಎಂದು ಹೇಳಲಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ವರುಣಾರ್ಭಟ ಜೋರಾಗಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ,
ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಪ್ರಮುಖ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಚಾಮರಾಜನಗರ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬೀಸಲಿರುವ ಬಲವಾದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಾಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳ ಹಲವೆಡೆ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

