ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ಕ್ಷೇತ್ರದಲ್ಲಿ ಮೂಲ ಸೌಕರ್ಯ ಕಲ್ಪಿಸಲು ಮೊದಲ ಆದ್ಯತೆ ನೀಡಲಾಗಿದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ, ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್ ಅವರನ್ನು ಬರಮಾಡಿಕೊಂಡು ಮಾತನಾಡಿದರು.
ಪಟ್ಟಣದ ಸಂತೆ ಮೈದಾನದ ನಿವಾಸಿಗಳಿಗೆ ಮನೆ ಒದಗಿಸಲಾಗಿದೆ. ಜಾಕೀರ್ ಹುಸೇನ್ ಮೊಹಲ್ಲಾದ ವಸತಿ ರಹಿತರನ್ನು ಗುರುತಿಸಿ ಮನೆಗಳನ್ನು ನಿರ್ಮಿಸಿಕೊಡಲಾಗಿದೆ. ಪಟ್ಟಣದ ಹೊರ ವಲಯದ ಅಮಾನಿ ಕೆರೆ ಮೈದಾನದಲ್ಲಿ ಸುಮಾರು ರೂ.500 ಕೋಟಿ ವೆಚ್ಚದಲ್ಲಿ ಸಮಾಜದ ಎಲ್ಲ ಸಮುದಾಯಗಳಿಗೂ ಸಮುದಾಯ ಭವನ ಹಾಗೂ ವಿವಿಧ ಇಲಾಖೆಗಳ ಕಚೇರಿಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಆದರೆ ಕೆಲವರು ಅದನ್ನು ವಿರೋಧಿಸಿ ನ್ಯಾಯಾಲಯದ ಮೆಟ್ಟಿಲು ಹತ್ತಿದ್ದಾರೆ ಎಂದು ಹೇಳಿದರು. ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥವಾದ ಬಳಿಕ, ಈಗಾಗಲೇ ಕೈಗೊಂಡಿರುವ ನಿರ್ಧಾದಂತೆ ವಿವಿಧ ಕಟ್ಟಡಗಳನ್ನು ನಿರ್ಮಿಸಲಾಗುವುದು. ಜನರಿಗೆ ಸೌಲಭ್ಯ ಒಂದೇ ಕಡೆ ಸಿಗುವಂತೆ ಮಾಡಲಾಗುವುದು ಎಂದು ಹೇಳಿದರು.
‘ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್ ಮಾತನಾಡಿ, ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರ ನಾಯಕತ್ವದಲ್ಲಿ ನಂಬಿಕೆ ಇಟ್ಟು ಹಾಗೂ ಅವರ ಅಭಿವೃದ್ಧಿ ರಾಜಕೀಯದಿಂದ ಆಕರ್ಷಿತಳಾಗಿ ಕಾಂಗ್ರೆಸ್ ಸೇರಿದ್ದೇನೆ. ಪಕ್ಷದ ಸಂಘಟನೆ ಹಾಗೂ ಗೆಲುವಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ಹೇಳಿದರು.
ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ಮುಖಂಡರಾದ ಗಂಗಾಧರ್, ಶ್ರೀನಿವಾಸ್, ಪುರಸಭೆಯ ಕಾಂಗ್ರೆಸ್ ಸದಸ್ಯರು ಇದ್ದರು.