ಶ್ರೀನಿವಾಸಪುರ: ಪಟ್ಟಣದಲ್ಲಿ ತಾಲ್ಲೂಕು ಒಕ್ಕಲಿಗರ ಕ್ಷೇಮಾಭಿವೃದ್ಧಿ ಟ್ರಸ್ಟ್ ಮತ್ತು ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮತಿ ವತಿಯಿಂದ ಸೆ.2 ರಂದು ಬೆಳಿಗ್ಗೆ 10 ಗಂಟೆಗೆ ನಾಡಪ್ರಭು ಕೆಂಪೇಗೌಡರ 514ನೇ ಜಯಂತ್ಯುತ್ಸವ ಏರ್ಪಡಿಸಲಗಿದೆ ಎಂದು ಟ್ರಸ್ಟ್ ಅಧ್ಯಕ್ಷ ವೇಣುಗೋಪಾಲರೆಡ್ಡಿ ತಿಳಿಸಿದರು.
ಪಟ್ಟಣದ ಭೈರವೇಶ್ವರ ವಿದ್ಯಾ ನಿಕೇತನದ ಆವರಣದಲ್ಲಿ ಗುರುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಕೆಂಪೇಗೌಡರ ಜಯಂತ್ಯುತ್ಸವದ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಬೆಳಿಗ್ಗೆ 10 ಗಂಟೆಯಿಂದ ಮುಳಬಾಗಿಲು ವೃತ್ತದಿಂದ ಮೆರವಣಿಗೆ ಹಾಗೂ ಮಧ್ಯಾಹ್ನ 12 ಗಂಟೆಗೆ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ. ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳನಾಥ ಸ್ವಾಮೀಜಿ ಉಪಸ್ಥಿತಿಯಲ್ಲಿ, ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ಎಂ.ಎಲ್.ಅನಿಲ್ ಕುಮಾರ್, ಮಾಜಿ ಸದಸ್ಯ ತೂಪಲ್ಲಿ ಆರ್.ಚೌಡರೆಡ್ಡಿ, ರಾಜ್ಯ ಮಾವು ಮಹಾ ಮಂಡಳಿ ಮಾಜಿ ಅಧ್ಯಕ್ಷ ಎಲ್.ಗೋಪಾಲಕೃಷ್ಣ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಡಾ. ಡಿ.ಕೆ.ರಮೇಶ್, ಯಲವಹಳ್ಳಿ ರಮೇಶ್, ಟಿ.ಕೋನಪ್ಪರೆಡ್ಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಹೇಳಿದರು.
ಟ್ರಸ್ಟ್‍ನ ಮಾಜಿ ಅಧ್ಯಕ್ಷ ನೀಲಟೂರು ಚಿನ್ನಪ್ಪರೆಡ್ಡಿ ಮಾತನಾಡಿ, ಒಕ್ಕಲಿಗ ಸಮುದಾಯದ ಸಾಧಕರಾದ ಎಂ.ಶ್ರೀರಾಮರೆಡ್ಡಿ, ಬಿ.ಎನ್.ರಮೇಶ್, ಡಿ.ದೇವರಾಜ್, ಎಂ.ಎನ್.ಅನುಚೇತ್, ಬಿ.ಎಲ್.ನಾಗೇಶ್, ಸುಭಾಷ್, ವಸಂತ ಕುಮಾರ್, ಎ.ಎನ್.ಕೃಷ್ಣಾರೆಡ್ಡಿ, ಕೆ.ಎಸ್.ನಾಗರಾಜ್ ಅವರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.
ಭೈರವೇಶ್ವರ ವಿದ್ಯಾ ನಿಕೇತನದ ನಿರ್ದೇಶಕ ಎ.ವೆಂಕಟರೆಡ್ಡಿ ಮಾತನಾಡಿ, ತಾಲ್ಲೂಕಿನ ಪ್ರತಿ ಗ್ರಾಮ ಪಂಚಾಯಿತಿಯಿಂದ ಆಗಮಿಸುವ ಕೆಂಪೇಗೌಡರ ಭಾವ ಚಿತ್ರ ಹೊತ್ತ ಪಲ್ಲಕಿಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ. ಈ ಸಂದರ್ಭದಲ್ಲಿ ಕಲಾವಿದರಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ ವಿವಿಧ ಕಲಾ ಕ್ಷೇತ್ರಗಳಲ್ಲಿನ ಕಲಾವಿದರು ಮೆರವಣಿಗೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಲಾಗಿದೆ. ಜಯಂತ್ಯುತ್ಸವ ಪಕ್ಷಾತೀತ ಹಾಗೂ ಜಾತ್ಯಾತೀತವಾಗಿದ್ದು, ಸಮಾಜದ ಎಲ್ಲ ಸಮುದಾಯದ ಜನರೂ ಭಾಗವಹಿಸುವಂತೆ ಕೋರಲಾಗಿದೆ ಎಂದು ಹೇಳಿದರು.