ಶ್ರೀನಿವಾಸಪುರ: ಪಟ್ಟಣದಲ್ಲಿ ಆ.15 ರಂದು ಬೆಳಿಗ್ಗೆ 9 ಗಂಟೆಗೆ ಶಾಸಕ ಕೆ.ಆರ್.ರಮೆಶ್ ಕುಮಾರ್ ಅಧ್ಯಕ್ಷತೆಯಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಚರಿಸುವ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.
ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಈ ಬಾರಿ ತಾಲ್ಲೂಕು ಮಟ್ಟದಲ್ಲಿ ವಿಶೇಷವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ. ಅಂದು ಎಲ್ಲಾ ಶಾಲಾ ಕಾಲೇಜು ಹಾಗೂ ಕಚೇರಿಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಬೇಕು ಎಂದು ಹೇಳಿದರು.
ಸ್ವಾತಂತ್ರ್ಯ ದಿನಾಚರಣೆ ಸಮಾರಂಭಕ್ಕೆ ಗೈರುಹಾಜರಾಗುವ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ರಾಷ್ಟ್ರೀಯ ಹಬ್ಬಕ್ಕೆ ತೋರಿದ ಅಗೌರವೆಂದು ಪರಿಗಣಿಸಿ ಸಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು. ಸಿಬ್ಬಂದಿ ಹಾಜರಾತಿ ಕುರಿತು ಇಲಾಖೆಯ ಮುಖ್ಯಸ್ಥರು ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ, ಉಪ ತಹಶೀಲದ್ದಾರ್ ಬಲರಾಮಚಂದ್ರೇಗೌಡ, ಶಿರಸ್ತೇದಾರ್ ಮನೋಹರ ಮಾನೆ, ಸರ್ಕಲ್ ಪೊಲೀಸ್ ಇನ್ಸ್‍ಪೆಕ್ಟರ್ ಜೆ.ಸಿ.ನಾರಾಯಣಸ್ವಾಮಿ, ಎಡಿಎಲ್‍ಆರ್ ನಟೇಶ್ ಮೂರ್ತಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎಂ.ಕೆ.ಹುಸೇನ್ ಸಾಬ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಧನಂಜಯ್, ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಡಾ. ಮಂಜುನಾಥರೆಡ್ಡಿ, ತಾಲ್ಲೂಕು ಪಂಚಾಯಿತಿ ಕಚೇರಿ ವ್ಯವಸ್ಥಾಪಕ ಡಿ.ಆರ್.ಮಂಜುನಾಥ್, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಎಂ.ಶ್ರೀನಿವಾಸನ್, ಬೆಸ್ಕಾಂ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಮತೀರ್ಥ, ಪುರಸಭೆ ಮುಖ್ಯಾಧಿಕಾರಿ ಜಯರಾಂ, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ನಾಗರಾಜ್, ಹರಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶಿವಕುಮಾರ್ ಇದ್ದರು.