
ಕೋಲಾರ : ಕನಿಷ್ಠ ಬೆಂಬಲ ಬೆಲೆ ಯಡಿ ರೈತರಿಂದ ರಾಗಿ ಖರೀದಿಸಲು ಅಕ್ಟೋಬರ್ 1ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದ್ದು, ನೋಂದಣಿ ಪ್ರಕ್ರಿಯೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಮತ್ತು ತೂಕ ಮತ್ತು ಗುಣಮಟ್ಟದಲ್ಲಿ ಲೋಪ ಆಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಅವರು ಸೂಚಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ರೈತರಿಂದ ರಾಗಿ ಖರೀದಿಸಲು ಪೂರ್ವ ಸಿದ್ಧತಾ ಕ್ರಮಗಳ ಮೊದಲನೆಯ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿ ಕ್ವಿಂಟಾಲ್ ರಾಗಿಗೆ 4886 ರೂಪಾಯಿಗಳು ಬೆಂಬಲ ಬೆಲೆಯನ್ನು ಸರ್ಕಾರ ನಿಗದಿ ಪಡಿಸಿದೆ.
ಕನಿಷ್ಟ ಬೆಂಬಲ ಯೋಜನೆಯಡಿ ರಾಗಿ ಖರೀದಿಗೆ ಸಂಬಂಧಿಸಿದಂತೆ ಸಂಗ್ರಹಣಾ ಏಜೆನ್ಸಿಗಳು ಪ್ರತಿ ತಾಲ್ಲೂಕು ಹಂತದಲ್ಲಿ ಅಗತ್ಯಕ್ಕೆ ತಕ್ಕಂತೆ ಖರೀದಿ ಕೇಂದ್ರಗಳನ್ನು ತೆರೆಯಬೇಕು, ರಾಗಿ ಖರೀದಿಗೆ ಸಂಬಂಧಿಸಿದಂತೆ ನೋಂದಣಿ ಪ್ರಕ್ರಿಯೆಗೆ ನಿಗದಿತ ಸ್ಥಳಗಳನ್ನು ಗುರ್ತಿಸಿ ರೈತರಿಗೆ ಮುಂಚಿತವಾಗಿ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಖರೀದಿ ಕೇಂದ್ರಗಳ ನೋಂದಣಿಗೆ ಅವಶ್ಯಕತೆ ಇರುವ ಟೇಬಲ್, ಚೇರ್, ಕಂಪ್ಯೂಟರ್ ಗಳು, ವಿದ್ಯುತ್ ಸಂಪರ್ಕ, ಇಂಟರ್ನೆಟ್, ತೂಕದ ಯಂತ್ರ ವ್ಯವಸ್ಥೆ ಮಾಡಿ, ರೈತರಿಗೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಕಲ್ಪಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ರೈತರಿಂದ ಖರೀದಿಸಿದ ರಾಗಿಯನ್ನು ಕ್ರೂಡಿಕರಿಸಿ ಶೇಖರಿಸಲು ಉಗ್ರಾಣಗಳು ವ್ಯವಸ್ಥಿತ ಗುಣಮಟ್ಟದಲ್ಲಿ ಇದೆಯೇ ಎಂದು ಪರಿಶೀಲಿಸಿ, ಅವಶ್ಯವಿದ್ದಲ್ಲಿ ಹೆಚ್ಚುವರಿ ಉಗ್ರಾಣಗಳನ್ನು ನಿಗದಿ ಪಡಿಸಿ, ರೈತರು ಕಡ್ಡಾಯವಾಗಿ ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಪೂಟ್ಸ್ ದತ್ತಾಂಶದಲ್ಲಿ ನೋಂದಾಯಿಸಿಕೊಂಡು, ಫೂಟ್ಸ್ ಐಡಿ ಪಡೆದಿರಬೇಕು. ನೋಂದಣಿ ಪ್ರಕ್ರಿಯೆಯಲ್ಲಿ ಫೂಟ್ಸ್ ಐಡಿ ಕಡ್ಡಾಯ ಎಂದು ಹೇಳಿದರು.
ಮುಳಬಾಗಿಲು ತಾಲೂಕಿನಲ್ಲಿ ಹೆಚ್ಚಾಗಿ ಭತ್ತ ಬೆಳೆಯುವುದರಿಂದ ಮಾತ್ರ ಭತ್ತ ಖರೀದಿ ಕೇಂದ್ರವನ್ನು ಪ್ರಾರಂಭಿಸಲು ನಿರ್ಧರಿಸಿದ್ದು ಜಿಲ್ಲೆಯ ಯಾವುದೇ ಭಾಗದ ರೈತರು ತಾವು ಬೆಳೆದಂತಹ ಭತ್ತವನ್ನು ತಂದು ಮಾರಾಟ ಮಾಡಬಹುದು ಎಂದು ತಿಳಿಸಿದರು.
ಬಂಗಾರಪೇಟೆ ಮತ್ತು ಮಾಲೂರು ತಾಲ್ಲೂಕುಗಳಲ್ಲಿ ಹೆಚ್ಚಾಗಿ ರೈತರು ರಾಗಿ ಬೆಳೆಯುವುದರಿಂದ ಆ ಭಾಗದಲ್ಲಿ ಅವಶ್ಯಕತೆ ಇದ್ದರೆ ಹೋಬಳಿ ಮಟ್ಟದಲ್ಲಿಯೂ ಖರೀದಿ ಕೇಂದ್ರಗಳನ್ನು ಪ್ರಾರಂಭ ಮಾಡುವಂತೆ ತಿಳಿಸಿದರು.
ಖರೀದಿ ಕೇಂದ್ರಗಳಿಗೆ ಸಿಬ್ಬಂದಿ ಕೊರತೆ ಇರುವುದರಿಂದ ಕಾಲೇಜುಗಳ ಪ್ರಶಿಕ್ಷಣಾರ್ಥಿಗಳನ್ನು ಸೇರಿಸಿಕೊಳ್ಳಲು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಪಿ ಬಾಗೇವಾಡಿ,ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರಾದ ಲತಾ, ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಪ್ರಸಾದ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಸುಮಾ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಕುಮಾರಸ್ವಾಮಿ, ಜಿಲ್ಲಾ ಉಗ್ರಾಣ ಕೇಂದ್ರಗಳ ವ್ಯವಸ್ಥಾಪಕರು ಮತ್ತು ಇತರರು ಉಪಸ್ಥಿತರಿದ್ದರು.


