ಅಧಿಕಾರಿಗಳು ಸಾರ್ವಜನಿಕರ ಸಂಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕು:ಶಾಸಕ ಕೆ.ಆರ್.ರಮೇಶ್ ಕುಮಾರ್

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಅಧಿಕಾರಿಗಳು ಸಾರ್ವಜನಿಕರ ಸಂಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕು. ಸರ್ಕಾರದ ಯೋಜನೆಗಳು ನಿಗದಿತ ಕಾಲ ಮಿತಿಯಲ್ಲಿ ಪೂರ್ಣಗೊಳ್ಳಬೇಕು. ಯಾವುದೇ ಕಾರಣಕ್ಕೂ ಬಡವರಿಗೆ ಅನ್ಯಾಯವಾಗದಂತೆ ಎಚ್ಚರ ವಹಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಸಬಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಕಂದಾಯ ಇಲಾಖೆ ಜಮೀನು ಪೋಡಿ ಮಾಡಿಕೊಡಲು ವಿಶೇಷ ಗಮನ ನೀಡಬೇಕು. ಯಾವುದೇ ರೈತ ಪೋಡಿಯಿಂದ ವಂಚಿತನಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಗ್ರಾಮೀಣ ಪ್ರದೇಶದಲ್ಲಿ ಸ್ಮಶಾನಕ್ಕೆ ಜಾಗ ಇಲ್ಲದ ಕಡೆ ಸ್ಮಶಾನಕ್ಕೆ ಅಗತ್ಯವಾದ ಭೂಮಿ ಒದಗಿಸಬೇಕು. ಸ್ಮಶಾನಾಭಿವೃದ್ದಿ ಕೈಗೊಳ್ಳಬೇಕು. ಅರಣ್ಯ ಪ್ರದೇಶದಲ್ಲಿ ಬಡವರಿಗೆ ಮಂಜೂರಾಗಿರುವ ಅಲ್ಪ ಪ್ರಮಾಣದ ಭೂಮಿ ಕಿತ್ತುಕೊಳ್ಳಲು ಪ್ರಯತ್ನಿಸಬಾರದು. ಪ್ರಭಾವಿಗಳು ಕಾಡು ಪ್ರದೇಶ ಒತ್ತುವರಿ ಮಾಡಿಕೊಂಡು ಆರ್ಥಿಕ ಚಟುವಟಿಕೆಗಳಿಗೆ ಬಳಸಿಕೊಳ್ಳುತ್ತಿದ್ದರೂ, ಅವರ ವಿರುದ್ಧ ಚಕಾರ ಎತ್ತದ ಅರಣ್ಯಾಧಿಕಾರಿಗಳು ಬಡವರನ್ನು ಒಕ್ಕಲೆಬ್ಬಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ಹೇಳಿದರು.
ಹೋಳೂರು ಹಾಗೂ ಸುಗಟೂರು ಹೋಬಳಿ ಸೇರಿದಂತೆ ತಾಲ್ಲೂಕಿನಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು. ಬೆಸ್ಕಾಂ ಅಧಿಕಾರಿಗಳು ಕ್ಷೇತ್ರದಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಕ್ಷೇತ್ರದಲ್ಲಿ ವಿದ್ಯುತ್ ಉಪ ವಿತರಣಾ ಕೇಂದ್ರಗಳ ಅಭಿವೃದ್ಧಿಗೆ ಸರ್ಕಾರದಿಂದ ರೂ.136 ಕೋಟಿ ಬಂದಿದೆ. ಜಿಲ್ಲೆಯಲ್ಲಿಯೇ ಮೊದಲ ಬಾರಿಗೆ ತಾಲ್ಲೂಕಿಗೆ ನಿರಂತರ ಜ್ಯೋತಿ ಯೋಜನೆ ಕಾರ್ಯಗತಗೊಳಿಸಲಾಗಿದೆ ಎಂದು ಹೇಳಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಘನ ತ್ಯಾಜ್ಯ ವಿಲೇವಾರಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಅಗತ್ಯ ಇರುವ ಕಡೆಗಳಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ಸ್ಥಾಪಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಕಸ ಸಂಗ್ರಹ ಕಾರ್ಯವನ್ನು ಚುರುಕುಗೊಳಿಸಬೇಕು. ಗ್ರಾಮಗಳಿಂದ ಕಸ ಸಾಗಿಸಲು ಈಗಾಗಲೆ ವಾಹನ ಸೌಲಭ್ಯ ಕಲ್ಪಿಸಲಾಗಿದೆ. ಪ್ರತಿ ಮನೆಗೂ ಹಸಿ ಹಾಗೂ ಒಣ ಕಸ ಸಂಗ್ರಹಿಸಲು ಅಗತ್ಯವಾದ ಬುಟ್ಟಿಗಳನ್ನು ವಿತರಿಸಲಾಗಿದೆ ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಯಾವುದೇ ಗ್ರಾಮ ಮೂಲ ಸೌಕರ್ಯದಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು. ಜನಾರೋಗ್ಯ ರಕ್ಷಣೆ ದೃಷ್ಟಿಯಿಂದ ರಸ್ತೆ, ಚರಂಡಿ ನಿರ್ಮಿಸಬೇಕು. ಸ್ವಚ್ಛತೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್, ತಾಲ್ಲೂಕಿನ ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್, ಕೋಲಾರ ತಾಲ್ಲೂಕು ತಹಶೀಲ್ದಾರ್ ನಾಗರಾಜ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್, ಕೋಚಿಮುಲ್ ಮಾಜಿ ಅಧ್ಯಕ್ಷ ಬ್ಯಾಟಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಜಯ್ ರೆಡ್ಡಿ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಜೆ.ಎನ್.ಪ್ರವೀಣ್ ಕುಮಾರ್ ಇದ್ದರು.