ಶ್ರೀನಿವಾಸಪುರ: ಜನರು ಆರೋಗ್ಯ ತಪಾಸಣೆಗೆ ಒಳಗಾಗುವುದರ ಮೂಲಕ ಸಂಭವನೀಯ ಅನಾರೋಗ್ಯದಿಂದ ಮುಕ್ತರಾಗಬೇಕು ಎಂದು ವೆಂಕಟೇಶ್ವರ ಗ್ರಾಮೀಣ ಆರೋಗ್ಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಹಾಗೂ ಎಎಪಿ ಮುಖಂಡ ಡಾ. ವೈ.ವಿ.ವೆಂಕಟಾಚಲ ಹೇಳಿದರು.
ಪಟ್ಟಣದ ಸಂತೆ ಮೈದಾನದಲ್ಲಿ ಶನಿವಾರ ತಾಲ್ಲೂಕು ಎಎಪಿ ಘಟಕದ ವತಿಯಿಂದ ಏರ್ಪಡಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಆರ್ಥಿಕ ಸಮಸ್ಯೆ ಹಾಗೂ ನಿರ್ಲಕ್ಷ್ಯದ ಪರಿಣಾಮವಾಗಿ ಗ್ರಾಮೀಣ ಪ್ರದೇಶದ ಬಡವರ ಆರೋಗ್ಯ ಹದಗೆಡುತ್ತಿದೆ ಎಂದು ಅಭಿಪ್ರಾಯಪಟ್ಟರು.
ಗ್ರಾಮೀಣರು ಕೃಷಿ ಚಟುವಟಿಕೆ ಒತ್ತಡದಲ್ಲಿ ವೈಯಕ್ತಿಕ ಆರೋಗ್ಯದ ಕಡೆ ಅಗತ್ಯ ಗಮನ ನೀಡಲು ಸಾಧ್ಯವಾಗುತ್ತಿಲ್ಲ. ಕೆಲವರು ವಾರದ ಸಂತೆಗೆ ಕಡ್ಡಾಯವಾಗಿ ಖರೀದಿಗೆ ಬರುತ್ತಾರೆ. ಅವರ ಹಿತದೃಷ್ಟಿಯಿಂದ ತಾಲ್ಲೂಕಿನ ಪ್ರತಿ ಸಂತೆಯಲ್ಲೂ ಎಎಪಿ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಲಾಗುತ್ತಿದೆ. ಪ್ರತಿ ಸಂತೆಯಲ್ಲೂ ನೂರಾರು ಜನರು ಶಿಬಿರದ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಶಿಬಿರದಲ್ಲಿ ಆರೋಗ್ಯ ಸಿಬ್ಬಂದಿ ವಿವಿಧ ಪರೀಕ್ಷೆಗಳನ್ನು ನಡೆಸಿ, ಆಯಾ ವ್ಯಕ್ತಿಯ ಆರೋಗ್ಯದ ಬಗ್ಗೆ ತಿಳಿಸುತ್ತಾರೆ. ತಜ್ಞ ವೈದ್ಯರು ಪರೀಕ್ಷಿಸಿ ಆರೋಗ್ಯ ಸಲಹೆ ನೀಡುತ್ತಾರೆ. ಅದರಂತೆ ನಡೆದುಕೊಂಡರೆ ಅವರ ಆರೋಗ್ಯ ಸುಧಾರಿಸುತ್ತದೆ. ಇದು ಎಎಪಿ ಉಚಿತ ಸೇವೆಯಾಗಿರುತ್ತದೆ ಎಂದು ಹೇಳಿದರು.
ಶಿಬಿರದಲ್ಲಿ ವೆಂಕಟೇಶ್ವರ ನರ್ಸಿಂಗ್ ಹೋಂ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರು 300ಕ್ಕೂ ಹೆಚ್ಚು ವ್ಯಕ್ತಗಳ ಆರೋಗ್ಯ ತಪಾಸಣೆ ನಡೆಸಿ, ಅಗತ್ಯ ವೈದ್ಯಕೀಯ ಸಲಹೆ ನೀಡಿದರು.