ಜನರು ಆರೋಗ್ಯ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ ವೈದ್ಯರ ಸಲಹೆಯಂತೆ ನಡೆದುಕೊಳ್ಳಬೇಕು:ಡಾ. ವೈ.ವಿ.ವೆಂಕಟಾಚಲ

ಶ್ರೀನಿವಾಸಪುರ: ಜನರು ಆರೋಗ್ಯ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು.. ವೈದ್ಯರ ಸಲಹೆಯಂತೆ ನಡೆದುಕೊಳ್ಳಬೇಕು ಎಂದು ತಾಲ್ಲೂಕು ಆಮ್ ಆದ್ಮಿ ಪಕ್ಷದ ಮುಖಂಡ ಡಾ. ವೈ.ವಿ.ವೆಂಕಟಾಚಲ ಹೇಳಿದರು.
ತಾಲ್ಲೂಕಿನ ರೋಜೇನಹಳ್ಳಿ ಸಂತೆ ಮೈದಾನದಲ್ಲಿ ಬುಧವಾರ ಆಮ್ ಆದ್ಮಿ ಪಕ್ಷದ ತಾಲ್ಲೂಕು ಘಟಕದ ವತಿಯಿಂದ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಜನರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ತಾಲ್ಲೂಕಿನ ಎಲ್ಲ ಸಂತೆಯಲ್ಲೂ ಆಮ್ ಆದ್ಮಿ ಪಕ್ಷದ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗುವುದು ಎಂದು ಹೇಳಿದರು.
ಗ್ರಾಮೀಣ ಪ್ರದೇಶದ ಜನ ವೈಯಕ್ತಿಕ ಆರೋಗ್ಯ ಕುರಿತು ಗಮನ ಹರಿಸುತ್ತಿಲ್ಲ. ಹಾಗಾಗಿ ರಕ್ತದೊತ್ತಡ ಹಾಗೂ ಮಧುಮೇಹ ಅವರ ಅರಿವಿಗೆ ಬರುತ್ತಿಲ್ಲ. ಅದು ತೀವ್ರ ಆರೋಗ್ಯ ಸಮಸ್ಯೆಗೆ ಕಾರಣವಾಗಿದೆ. ಸಂತೆಗಳಲ್ಲಿ ಆರೋಗ್ಯ ತಪಾಸಣೆ ಹಾಗೂ ಆರೋಗ್ಯ ಅರಿವು ಮೂಡಿಸುವ ಕಾರ್ಯಕ್ರಮ ಕೈಗೊಳ್ಳುವುದರಿಂದ ಹೆಚ್ಚಿನ ಜನರಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.
ತಾಲ್ಲೂಕಿನಲ್ಲಿ ನಡೆಯುವ ಪ್ರತಿ ಸಂತೆಯಲ್ಲೂ ಪ್ರತಿ ವಾರ ವೆಂಕಟೇಶ್ವರ ನರ್ಸಿಂಗ್ ಹೋಂ ಸಿಬ್ಬಂದಿ ವತಿಯಿಂದ ಆರೋಗ್ಯ ತಪಾಸಣೆ ನಡೆಸಲಾಗುವುದು. ಆರೋಗ್ಯ ಪರೀಕ್ಷೆಗಳನ್ನು ಉಚಿತವಾಗಿ ನಡೆಸಲಾಗುವುದು. ಬೆಳಿಗ್ಗೆ 11 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಆರೋಗ್ಯ ತಪಾಸಣೆ ನಡೆಸಲಾಗುವುದು. ಮಧ್ಯಾಹ್ನ 4 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ನಾನು ಶಿಬಿರದಲ್ಲಿ ಭಾಗವಹಿಸಿ ಅಗತ್ಯ ಸೇವೆ ನೀಡುತ್ತೇನೆ ಎಂದು ಹೇಳಿದರು.
ಶೇ.60 ರಷ್ಟು ಜನ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿಲ್ಲ. ಹಾಗಾಗಿ ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತಿದೆ. ಬಹುತೇಕ ಗ್ರಾಮೀಣರು ಪ್ರತಿ ವಾರ ಸಂತೆಗೆ ಬರುವುದರಿಂದ ತಪಾಸಣೆ ಸುಲಭವಾಗುತ್ತದೆ. ಇರುವ ಕಾಯಿಲೆಗೆ ಸಂಬಂಧಿಸಿದಂತೆ ತಿಳಿಸಲಾಗುವುದು. ಎಲ್ಲಿ ತೋರಿಸಿಕೊಳ್ಳಬೇಕು ಎಂಬ ಮಾಹಿತಿ ನೀಡಲಾಗುವುದು ಎಂದು ಹೇಳಿದರು.
ರೋಜೇನಹಳ್ಳಿ ಸಂತೆ ಮೈದಾನದಲ್ಲಿ ನಡೆಸಲಾದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ, 250 ಮಂದಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು.