

ಕೋಲಾರ : ಭಾರತ ಸಂವಿಧಾನ ಅಂಗೀಕರಿಸಿಕೊಂಡು 75ನೇ ವರ್ಷದ ಆಚರಣೆಯ ಪ್ರಯುಕ್ತ ಜನವರಿ 26 ರಂದು ಮಾನ್ಯ ಮುಖ್ಯ ಮಂತ್ರಿಗಳು ರಾಜ್ಯ ಮಟ್ಟದಲ್ಲಿ ‘ಸಂವಿಧಾನ ಜಾಗೃತಿ ಜಾಥ ” ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು ಹಾಗೂ ಅದೇ ರೀತಿ ಕೋಲಾರ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರು ಸಚಿವರು ಮತ್ತು ವಿಧಾನ ಸಭೆ ಮತ್ತು ವಿಧಾನ ಪರಿಷತ್ ಸದಸ್ಯರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ.
ಜಿಲ್ಲಾ ಕೇಂದ್ರದಲ್ಲಿ ಚಾಲನೆ ನೀಡುವ ಮೂಲಕ ಜನವರಿ 26 ರಿಂದ ಫೆಬ್ರವರಿ 23 ರವರೆಗೆ ಜಿಲ್ಲೆಯ ಎಲ್ಲಾ 155 ಪಂಚಾಯಿತಿಗಳಿಗೆ ಸಂವಿಧಾನದ ಆಶಯ ಮತ್ತು ಮೌಲ್ಯಗಳನ್ನು ಹಾಗೂ ಸರ್ಕಾರದ ಕಾರ್ಯಕ್ರಮಗಳನ್ನು ಒಳಗೊಂಡ ಎಲ್ಇಡಿ ವಾಹನ ಸ್ತಬ್ದಚಿತ್ರಗಳ ಮೆರವಣಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ, ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜನವರಿ 26 ರಂದು ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ವಿಧಾನ ಸಭೆ ಮತ್ತು ವಿಧಾನ ಪರಿಷತ್ ಸದಸ್ಯರು “ಸಂವಿಧಾನ ಜಾಗೃತಿ ಜಾಥ” ವಾಹನ ಹಾಗೂ ಸ್ತಬ್ದಚಿತ್ರಕ್ಕೆ ಚಾಲನೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
”ಸಂವಿಧಾನ ಜಾಗೃತಿ ಜಾಥ” ವಾಹನ ಹಾಗೂ ಸ್ತಬ್ಬ ಚಿತ್ರಕ್ಕೆ ಎಲ್ಲಾ 155 ಗ್ರಾಮ ಪಂಚಾಯಿತಿಗಳಿಗೆ ತಲುಪುವ ಕುರಿತು ಮೆರವಣಿಗೆಯ ರಚನೆ, ಸಂಯೋಜನೆ, ಮಾರ್ಗಗಳು, ತಂಗುವಿಕೆ ಇನ್ನಿತರೆ ವಿಷಯಗಳನ್ನು ಕುರಿತು ಸಮಿತಿಗಳನ್ನು ರಚಿಸಲಾಗಿದೆ. ಸದರಿ ದಿನದಂದು ಎಲ್ಲಾ ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವುದು ಹಾಗೂ ಪ್ರಬಂಧ ಸ್ಪರ್ಧೆ ಹಮ್ಮಿಕೊಳ್ಳಲು ನಿರ್ದೇಶವನ್ನು ನೀಡಲಾಗಿದೆ ಎಂದರು.
“ಸಂವಿಧಾನ ಜಾಗೃತಿ ಜಾಥ” ವಾಹನ ಗ್ರಾಮ ಪಂಚಾಯಿತಿಗೆ ತಲುಪಿದ ತಕ್ಷಣ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸ್ವಾಗತಿಸಿ, ಶಾಲಾ, ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು, ಸಂಘ ಸಂಸ್ಥೆಗಳು, ಎನ್.ಜಿ.ಓಗಳು ಸಂವಿಧಾನದ ಬಗ್ಗೆ ಅರಿವು ಮೂಡಿಸಲು ನಿರ್ದೇಶನಗಳನ್ನು ನೀಡಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸ, ಜಿಲ್ಲೆಯ ಜಾಗೃತಿ ಹಾಗೂ ಉಸ್ತುವಾರಿ ಸಮಿತಿಯ ಸದಸ್ಯರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಾಗೂ ಇತರೆ ಎಲ್ಲಾ ಸಮುದಾಯದ ಸಂಘಟನೆಗಳ ಮುಖಂಡರು ಹಾಗೂ ಪದಾಧಿಕಾರಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.



