


ಕೋಲಾರ, ಜುಲೈ 9: ಮತದಾರರ ಪಟ್ಟಿ ಪ್ರಜಾಪ್ರಭುತ್ವದ ಭದ್ರ ಬುನಾದಿಯಾಗಿದ್ದು, ‘ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ–2026’ (ಎಸ್ಐಆರ್) ಕಾರ್ಯವನ್ನು ಸಂಪೂರ್ಣ ದೋಷರಹಿತವಾಗಿ ಹಾಗೂ ಪಾರದರ್ಶಕವಾಗಿ ಪೂರ್ಣಗೊಳಿಸಲು ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ರೋಲ್ ವೀಕ್ಷಕರಾದ ತುಲಸಿ ಮದ್ದಿನೇನಿ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ನಡೆದ ‘ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ–2026’ರ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಚುನಾವಣಾ ನೋಂದಣಿ ಅಧಿಕಾರಿಗಳು (ಇಆರ್ಒ), ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳು (ಎಇಆರ್ಒ) ಹಾಗೂ ಮೇಲ್ವಿಚಾರಣಾ ಅಧಿಕಾರಿಗಳೊಂದಿಗೆ ಪರಿಷ್ಕರಣೆ ಕಾರ್ಯದ ಪ್ರಗತಿ ಪರಿಶೀಲಿಸಿದರು.
ಮರಣ ಹೊಂದಿರುವ ಹಾಗೂ ಶಾಶ್ವತವಾಗಿ ಬೇರೆಡೆಗೆ ಸ್ಥಳಾಂತರಗೊಂಡಿರುವ ಮತದಾರರನ್ನು ನಿಖರವಾಗಿ ಗುರುತಿಸಿ ಪಟ್ಟಿಯಿಂದ ಕೈಬಿಡುವ ಪ್ರಕ್ರಿಯೆಯಲ್ಲಿ ಯಾವುದೇ ಲೋಪ ಉಂಟಾಗದಂತೆ ಕ್ರಮವಹಿಸಬೇಕು. ಪ್ರತಿಯೊಂದು ದಾಖಲೆಯ ಪರಿಶೀಲನೆ ಪಾರದರ್ಶಕ ಹಾಗೂ ನಿಖರವಾಗಿರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ಆರ್. ರವಿ, ಕರಡು ಮತದಾರರ ಪಟ್ಟಿಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರ ಹೆಸರೂ ಸೇರ್ಪಡೆಯಾಗಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದರು. ಮನೆಗಳಿಗೆ ಭೇಟಿ ನೀಡುವ ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್ಒ) ಸರಿಯಾದ ಮಾಹಿತಿ ನೀಡಿ, ಗಣತಿ ನಮೂನೆಯನ್ನು ಭರ್ತಿ ಮಾಡಿ ಸಹಿ ಮಾಡಿ ಸಲ್ಲಿಸಬೇಕು. ನಮೂನೆ ಸಲ್ಲಿಸದಿದ್ದರೆ ಅರ್ಹ ಮತದಾರರ ಹೆಸರು ಪಟ್ಟಿಯಿಂದ ಕೈಬಿಡುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸಿ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
2026ರ ಅಕ್ಟೋಬರ್ 1ನ್ನು ಅರ್ಹತಾ ದಿನಾಂಕವಾಗಿಟ್ಟುಕೊಂಡು ನಡೆಯುತ್ತಿರುವ ಮೂರನೇ ಹಂತದ ಪರಿಷ್ಕರಣೆ ಕಾರ್ಯವು ಜೂನ್ 30ರಿಂದ ಜುಲೈ 29ರವರೆಗೆ ನಡೆಯಲಿದೆ. ಜಿಲ್ಲೆಯ 12,95,265 ಮತದಾರರ ಅನುಕೂಲಕ್ಕಾಗಿ 1,538 ಮತಗಟ್ಟೆಗಳನ್ನು ಮತದಾರರ ಸಹಾಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಲಾಗಿದೆ. ಬಿಎಲ್ಒಗಳು ಸಂಗ್ರಹಿಸಿರುವ 92,956 ನಮೂನೆಗಳನ್ನು (ಶೇ. 7.18) ಈಗಾಗಲೇ ಮೊಬೈಲ್ ಆ್ಯಪ್ ಮೂಲಕ ಯಶಸ್ವಿಯಾಗಿ ಡಿಜಿಟಲೀಕರಣ ಮಾಡಲಾಗಿದೆ ಎಂದು ತಿಳಿಸಿದರು.
ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡುವ ಉದ್ದೇಶದಿಂದ ವಿವಿಧ ರಾಜಕೀಯ ಪಕ್ಷಗಳಿಂದ 4,006 ಬೂತ್ ಮಟ್ಟದ ಏಜೆಂಟರನ್ನು (ಬಿಎಲ್ಎ) ನೇಮಕ ಮಾಡಲಾಗಿದೆ. ಯುವ ಮತದಾರರಲ್ಲಿ ಜಾಗೃತಿ ಮೂಡಿಸಲು ಜಿಲ್ಲೆಯಾದ್ಯಂತ 637 ಚುನಾವಣಾ ಸಾಕ್ಷರತಾ ಕ್ಲಬ್ಗಳು ಹಾಗೂ 581 ಮತದಾರರ ಜಾಗೃತಿ ವೇದಿಕೆಗಳು ಕಾರ್ಯನಿರ್ವಹಿಸುತ್ತಿವೆ. ಸ್ವೀಪ್ ಕಾರ್ಯಕ್ರಮದಡಿ ವಿದ್ಯಾರ್ಥಿಗಳಿಂದ ಜಾಥಾ, ಸೈಕಲ್ ಜಾಥಾ, ಬೈಕ್ ರ್ಯಾಲಿ, ಪಂಜಿನ ಮೆರವಣಿಗೆ ಸೇರಿದಂತೆ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಲಾಯಿತು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಸ್.ಎಂ. ಮಂಗಳ, ತಹಸೀಲ್ದಾರರಾದ ಸುಜಾತ, ರೂಪ, ಗಾಯತ್ರಿ, ಗೀತಾ, ಜಿಲ್ಲೆಯ ಎಲ್ಲಾ ಚುನಾವಣಾ ನೋಂದಣಿ ಅಧಿಕಾರಿಗಳು, ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳು, ಮೇಲ್ವಿಚಾರಣಾ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

