ಮುಳಬಾಗಿಲು; ಆ.2: ರಾಜ್ಯ ಹಾಗೂ ರಾಷ್ಟ್ರದಲ್ಲಿ ದಿನೇದಿನೇ ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಸರ್ಕಾರಗಳು ಯಾವುದೇ ಕ್ರಮಕೈಗೊಳ್ಳದೇ ನಿರ್ಲಕ್ಷ್ಯಧೋರಣೆ ಅನುಸರಿಸುತ್ತಿದ್ದು, ಕೂಡಲೇ ಪ್ರಭಲ ಕಾನೂನು ಜಾರಿಗೆ ತರುವ ಮೂಲಕ ಮಹಿಳೆಯರ ರಕ್ಷಣೆಗೆ ಮುಂದಾಗಬೇಕು ಎಂದು ರೈತಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಮಾಡಿರುವ ಘಟನೆ, ಸೌಜನ್ಯ ಕೊಲೆ ಪ್ರಕರಣಗಳು ತೀವ್ರ ಸ್ವರೂಪ ಪಡೆದುಕೊಂಡಿದ್ದರೂ ರಾಜ್ಯ ಸರ್ಕಾರವು
ಸರಿಯಾದ ರೀತಿಯಲ್ಲಿ ಕ್ರಮಕ್ಕೆ ಮುಂದಾಗದೆ ಇದ್ದು, ರಾಜಕೀಯ ನಾಯಕರು ಆರೋಪ ಪ್ರತ್ಯಾರೋಪಗಳಿಗಷ್ಟೇ ಸೀಮಿತಗೊಂಡಿದ್ದಾರೆ.
ಇನ್ನು ಮಣಿಪುರದಲ್ಲಿ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಬೆತ್ತಲೆ ಮೆರವಣಿಗೆ ಮಾಡಿರುವುದು ಇಡೀ ಸಮಾಜವೇ ತಲೆತಗ್ಗಿಸುವಂತಾಗಿದ್ದರೂ ಕೇಂದ್ರ ಸರಕಾರವು ಮೀನ ಮೇಷ ಎಣಿಸುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಹಾಗೂ ರಾಷ್ಟ್ರದಲ್ಲಿ ದಿನೇದಿನೇ ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಕಾರಣ ಯಾವುದೇ ಪ್ರಕರಣ ಬೆಳಕಿಗೆ ಬಂದ ಸಂದರ್ಭದಲ್ಲಿಯೂ ಸರ್ಕಾರಗಳು ತ್ವರಿತವಾಗಿ ಕ್ರಮಕೈಗೊಳ್ಳದೆ, ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮವಹಿಸದೇ ಇರುವುದಾಗಿದ್ದು, ಇನ್ನಾದರೂ ಇಂತಹ ಘಟನೆಗಳು ಮರುಕಳಿಸದಿರಲು ಪ್ರಭಲ ಕಾನೂನು ಜಾರಿಗೆ ತರುವ ಜೊತೆಗೆ ಅಪರಾಧಿಗಳನ್ನು ಕಠಿಣ ಶಿಕ್ಷೆಗೆ ಗುರಿಪಡಿಸುವ ಮೂಲಕ ಮಹಿಳೆಯರ ರಕ್ಷಣೆಗೆ ಮುಂದಾಗಬೇಕೆಂದು ಆಗ್ರಹಿಸಿದ್ದಾರೆ.