


ಕುಂದಾಪುರ: ಯಾವುದೇ ಫಲಾಪೇಕ್ಷೆಗಳಿಲ್ಲದೆ ಜನರು ಜನರಿಗಾಗಿ ಸಹಾಯ ಮಾಡುವುದು ರೆಡ್ ಕ್ರಾಸ್ ಸಂಸ್ಥೆಯ ಮೂಲ ಉದ್ದೇಶವಾಗಿದೆ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ತಾಲೂಕು ಘಟಕದ ಸಭಾಪತಿಗಳಾದ ಎಸ್.ಜಯಕರ ಶೆಟ್ಟಿ ಹೇಳಿದರು.
ಅವರು ಸೆಪ್ಟೆಂಬರ್ 20ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಯೂಥ್ ರೆಡ್ ಕ್ರಾಸ್ ಘಟಕದ ಕಾರ್ಯಚಟುವಟಿಕೆಗಳ ಹಾಗೂ ಜೂನಿಯರ್ ರೆಡ್ ಕ್ರಾಸ್ ಘಟಕದ ಉದ್ಘಾಟನೆ, ಮಾದಕ ವಸ್ತುಗಳ ವಿರುದ್ಧ ಜಾಗೃತಿ, ವಿದ್ಯಾರ್ಥಿವೇತನ ವಿತರಣೆ ಮತ್ತು ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ರೆಡ್ ಕ್ರಾಸ್ ಸಂಸ್ಥೆಯು ಯಾವುದೇ ವಿಪತ್ತಿನ ಸಂದರ್ಭದಲ್ಲಿ ಕಷ್ಟಕ್ಕೆ ಸ್ಪಂದಿಸುವ,ಸಹಾಯ ಮತ್ತು ಪರಿಹಾರ ಕಾರ್ಯಾಚರಣೆಗೆ ತನ್ನನ್ನು ತಾನು ತೊಡಗಿಸಿಕೊಳ್ಳುವ ಸಂಸ್ಥೆಯಾಗಿದೆ. ಸಂಸ್ಥೆಯ ಸ್ವಯಂ ಸೇವಕರು ಮಾನವೀಯತೆ ನೆಲೆಯೊಂದಿಗೆ ಬೇಧಭಾವಗಳಿಲ್ಲದೆ ಕೆಲಸ ನಿರ್ವಹಿಸುತ್ತಾರೆ ಎಂದು ಹೇಳಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಚಿನ್ಮಯಿ ಆಸ್ಪತ್ರೆಯ ನಿರ್ದೇಶಕರಾದ ಡಾ.ಉಮೇಶ್ ಪುತ್ರನ್ ಅವರು ಮಾತನಾಡಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ವಿಷಯದ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಶಾಂತಾರಾಮ್ ಪ್ರಭು ವಹಿಸಿದ್ದರು.
ಈ ಸಂದರ್ಭದಲ್ಲಿ ಭಾರತೀಯ ಸೇನೆಯ ಆಫೀಸರ್ ತರಬೇತಿ ಅಕಾಡೆಮಿಗೆ ಆಯ್ಕೆಯಾದ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಭರತ್ ಬಾಬು ದೇವಾಡಿಗ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಆಗಮಿಸಿದ್ದ ಸೇನಾ ನಿವೃತ್ತರಾದ ಸಂತೋಷ್ ಶೆಟ್ಟಿ ಸೇನೆಯಲ್ಲಿನ ತಮ್ಮ ಅನುಭವವನ್ನು ಹಂಚಿಕೊಂಡರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ತಾಲೂಕು ಘಟಕದ ಶಿವರಾಂ ಶೆಟ್ಟಿ, ಸೀತಾರಾಮ ಶೆಟ್ಟಿ, ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ.ಗೊಂಡ ಭಂಡಾರ್ಕಾರ್ಸ್ ಪದವಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ.ಸತ್ಯನಾರಾಯಣ, ಐಕ್ಯೂಎಸಿ ಸಂಯೋಜಕರಾದ ಡಾ.ವಿಜಯ ಕುಮಾರ್ ಉಪಸ್ಥಿತರಿದ್ದರು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ತಾಲೂಕಿನ ಯುವ ಘಟಕದ ಸಂಯೋಜಕರಾದ ಸತ್ಯನಾರಾಯಣ ಪುರಾಣಿಕ್ ಅವರು ರೆಡ್ ಕ್ರಾಸ್ ಸಂಸ್ಥೆಯ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಸ್ವಾಗತಿಸಿದರು. ಭಂಡಾರ್ಕಾರ್ಸ್ ಪದವಿ ಕಾಲೇಜಿನ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮ ಅಧಿಕಾರಿಣಿ ವಿದ್ಯಾರಾಣಿ ವಂದಿಸಿದರು. ಇಂಗ್ಲೀಷ್ ಉಪನ್ಯಾಸಕಿ ರೋಹಿಣಿ ಹೆಚ್.ಬಿ ಕಾರ್ಯಕ್ರಮ ನಿರೂಪಿಸಿದರು.
