

ಶ್ರೀನಿವಾಸಪುರ: ನಿವೃತ್ತ ಸರ್ಕಾರಿ ನೌಕರರು ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡಬೇಕು. ಚಟುವಟಿಕೆಯಿಂದ ಇರಲು ಪ್ರಯತ್ನಿಸಬೇಕು ಎಂದು ತಾಲ್ಲೂಕು ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಾರಾಯಣರೆಡ್ಡಿ ಹೇಳಿದರು.
ಪಟ್ಟಣದ ತಾಲ್ಲೂಕು ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ನಿವೃತ್ತ ನೌಕರರ ಮಾಸಿಕ ಸಭೆ, ಶಿಕ್ಷಕರ ದಿನಾಚರಣೆ ಹಾಗೂ ಸರ್.ಎಂ.ವಿಶ್ವೇಶ್ವರಯ್ಯ ಅವರ ಜನ್ಮದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ದಾರ್ಶನಿಕರ ಹಾದಿಯಲ್ಲಿ ಸಾಗಬೇಕು ಎಂದು ಹೇಳಿದರು.
ಸಂಘದ ವತಿಯಿಂದ ಸಮಾಜ ಸೇವಾ ಕಾರ್ಯಕ್ರಮ ಕೈಗೊಳ್ಳಲಾಗುವುದು. ಪ್ರತಿಭಾವಂತ ವಿದಾರ್ಥಿಗಳಿಗೆ ಗೌರವ ಸಮರ್ಪಣೆ ಮಾಡಲಾಗುವುದು. ಮಾಸಿಕ ಸಭೆಯಲ್ಲಿ ನಿವೃತ್ತ ನೌಕರರ ಕುಂದು ಕೊರತೆ ವಿಚಾರಿಸಲಾಗುವುದು. ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲ್ಲೂಕು ನಿವೃತ್ತ ಸರ್ಕಾರಿ ನೌಕರರ ಸಂಘದ ಹಿರಿಯ ಸದಸ್ಯರು ಹಾಗೂ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದಿದ್ದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಸಂಘದ ಉಪಾಧ್ಯಕ್ಷ ಶ್ರೀನಿವಾಸರೆಡ್ಡಿ, ಬೈರಾರೆಡ್ಡಿ, ನಾಗರಾಜ್, ಮಾರಪ್ಪರೆಡ್ಡಿ, ಸತ್ಯನಾರಾಯಣರೆಡ್ಡಿ ಇದ್ದರು.