


ಶ್ರೀನಿವಾಸಪುರ: ಪಟ್ಟಣದ ಚಿಂತಾಮಣಿ ರಸ್ತೆಯಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನದ ಸರ್ಕಾರಿ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಮಾದರಿ ಶಾಲೆಗೆ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಜಿಲ್ಲಾ ಸಮಿತಿ ಸದಸ್ಯ ಶಬ್ಬೀರ್ ಅಹ್ಮದ್ ಭೇಟಿ ನೀಡಿ ಶಾಲೆಯ ಶೈಕ್ಷಣಿಕ ಚಟುವಟಿಕೆಗಳು, ದಾಖಲಾತಿ ಪ್ರಗತಿ ಹಾಗೂ ವಿದ್ಯಾರ್ಥಿಗಳ ಸಾಧನೆ ಕುರಿತು ಮಾಹಿತಿ ಪಡೆದರು.
ಶಾಲೆಯ ಶಿಕ್ಷಕರೊಂದಿಗೆ ಸಮಾಲೋಚನೆ ನಡೆಸಿದ ಅವರು, ಹೊಸ ಶೈಕ್ಷಣಿಕ ವರ್ಷದ ದಾಖಲಾತಿ, ವಿದ್ಯಾರ್ಥಿಗಳ ಹಾಜರಾತಿ ಹಾಗೂ ಶೈಕ್ಷಣಿಕ ಗುಣಮಟ್ಟ ವೃದ್ಧಿಗೆ ಕೈಗೊಳ್ಳಲಾಗುತ್ತಿರುವ ಕ್ರಮಗಳ ಬಗ್ಗೆ ಚರ್ಚಿಸಿದರು.
ಎಸ್ಎಸ್ಎಲ್ಸಿ ತರಗತಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಹಾಗೂ ಪರೀಕ್ಷಾ ಸಿದ್ಧತೆ ಕುರಿತು ಮಾಹಿತಿ ಪಡೆದ ಶಬ್ಬೀರ್ ಅಹ್ಮದ್, ಉತ್ತಮ ಫಲಿತಾಂಶಕ್ಕಾಗಿ ಆರಂಭದಿಂದಲೇ ವ್ಯವಸ್ಥಿತ ತರಬೇತಿ ನೀಡುವ ಅಗತ್ಯವಿದೆ ಎಂದು ತಿಳಿಸಿದರು. ವಿಷಯವಾರು ವಿಶೇಷ ತರಬೇತಿ, ನಿಯಮಿತ ಮಾದರಿ ಪರೀಕ್ಷೆ ಮತ್ತು ನಿರಂತರ ಮೌಲ್ಯಮಾಪನದ ಮೂಲಕ ಶೇ.100 ಫಲಿತಾಂಶ ಸಾಧಿಸಲು ಪ್ರಯತ್ನಿಸಬೇಕು ಎಂದು ಮುಖ್ಯ ಶಿಕ್ಷಕಿ ಅರುಣ ಅವರಿಗೆ ಸಲಹೆ ನೀಡಿದರು.
ಶಾಲೆಯು ಇತ್ತೀಚಿನ ವರ್ಷಗಳಲ್ಲಿ ದಾಖಲಾತಿ ಹೆಚ್ಚಳ ಹಾಗೂ ಶೈಕ್ಷಣಿಕ ಸಾಧನೆಯಲ್ಲಿ ಗಮನಾರ್ಹ ಪ್ರಗತಿ ಸಾಧಿಸಿರುವುದನ್ನು ಶ್ಲಾಘಿಸಿದ ಅವರು, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.
ಸುಮಾರು 140 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಶಾಲೆಯಲ್ಲಿ ಕೇವಲ ಒಬ್ಬ ಮುಖ್ಯ ಶಿಕ್ಷಕಿ ಹಾಗೂ ಐವರು ಅತಿಥಿ ಶಿಕ್ಷಕರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಹಿಂದಿ ಶಿಕ್ಷಕರ ಹುದ್ದೆ ಖಾಲಿ ಇರುವುದರ ಜೊತೆಗೆ ದೈಹಿಕ ಶಿಕ್ಷಣ ಶಿಕ್ಷಕರೂ ಇಲ್ಲದಿರುವುದು ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಕ್ರೀಡಾ ಚಟುವಟಿಕೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಶಿಕ್ಷಕರ ಕೊರತೆಯನ್ನು ಶೀಘ್ರದಲ್ಲಿ ನಿವಾರಿಸಿ ಅಗತ್ಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ನಿಯೋಜಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಶಬ್ಬೀರ್ ಅಹ್ಮದ್ ಅಭಿಪ್ರಾಯಪಟ್ಟರು.
ಭೇಟಿಯ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ಅರುಣ, ಶಿಕ್ಷಕ ವೃಂದ, ಅಲ್ಪಸಂಖ್ಯಾತರ ಮಾಹಿತಿ ಕೇಂದ್ರದ ಸಿಬ್ಬಂದಿ ಮುಬಾರಕ್ ಪಾಷಾ, ನವಾಜ್ ಪಾಷಾ ಹಾಗೂ ಇತರರು ಉಪಸ್ಥಿತರಿದ್ದರು.

