

ನವದೆಹಲಿ: ಎಲ್ಲಾ ವಿಚಾರಗಳಿಗೂ ರಾಜ್ಯಗಳು ಸುಪ್ರೀಂ ಕೋರ್ಟ್ ಗೆ ಬರಬೇಕಾ? ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ. ಕರ್ನಾಟಕ ಸರ್ಕಾರ ಬರ ಪರಿಹಾರ ಕೊಡಿಸುವಂತೆ ಕೇಂದ್ರದ ವಿರುದ್ಧ ಸಲ್ಲಿಸಿದ್ದ ಅರ್ಜಿ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ಈ ರೀತಿ ಪ್ರಶ್ನಿಸಿದೆ.
ಕೇಂದ್ರ ಹಾಗೂ ರಾಜ್ಯಗಳ ನಡುವೆ ವಾದಗಳಾಗುವುದು ಬೇಡ ಎಂದೂ ಸುಪ್ರೀಂ ಕೋರ್ಟ್ ಇದೇ ವೇಳೆ ಅಭಿಪ್ರಾಯಪಟ್ಟಿದೆ. ಬರ ನಿರ್ವಹಣೆಗಾಗಿ ಎನ್ ಡಿಆರ್ ಎಫ್ ನಿಂದ ಪರಿಹಾರ ಬಿಡುಗಡೆ ಮಾಡುವುದಕ್ಕೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಕರ್ನಾಟಕ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.
ನ್ಯಾಯಧೀಶರಾದ ಬಿಆರ್ ಗವಾಯಿ ಹಾಗೂ ಸಂದೀಪ್ ಮೆಹ್ತಾ ಅವರ ಪೀಠ ಈ ವಿಚಾರಣೆ ನಡೆಸಿದ್ದು, ರಾಜ್ಯಗಳು ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್ ಕದತಟ್ಟಿರುವ ಹಲವು ಉದಾಹರಣೆಗಳನ್ನು ನೋಡುತ್ತಿದ್ದೇವೆ ಎಲ್ಲಾ ವಿಚಾರಗಳಿಗೂ ರಾಜ್ಯಗಳು ಸುಪ್ರೀಂ ಕೋರ್ಟ್ ಗೆ ಬರಬೇಕಾ? ಎಂದು ಪ್ರಶ್ನಿಸಿದೆ. ಇದೇ ವೇಳೆ ಕೇಂದ್ರಕ್ಕೆ ಈ ವಿಷಯವಾಗಿ ನೊಟೀಸ್ ಜಾರಿಗೊಳಿಸುವುದಾಗಿ ಕೋರ್ಟ್ ಮೌಖಿಕವಾಗಿ ಹೇಳಿತು. ಆದರೆ, ಕೇಂದ್ರ ಸರ್ಕಾರದ ಪರ ಹಾಜರಿದ್ದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಹಾಗೂ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನೊಟೀಸ್ ನೀಡದಂತೆ ಮನವಿ ಮಾಡಿದ್ದು, ಕೇಂದ್ರ ಸರ್ಕಾರದಿಂದ ಸೂಚನೆಗಳನ್ನು ಪಡೆದು 2 ವಾರಗಳಲ್ಲಿ ಈ ವಿಷಯವಾಗಿ ಸುಪ್ರೀಂ ಕೋರ್ಟ್ ನಲ್ಲಿ ಹೇಳಿಕೆ ದಾಖಲಿಸುವುದಾಗಿ ಭರವಸೆ ನೀಡಿದ್ದಾರೆ.
ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಸರ್ಕಾರದ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಇದೇ ವೇಳೆ, ಮೆಹ್ತಾ ಅವರು ಕರ್ನಾಟಕ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸುವ ಬದಲು, ಯಾರಾದರೂ ಈ ಸಮಸ್ಯೆಯ ಬಗ್ಗೆ ಅಧಿಕಾರಿಗಳೊಂದಿಗೆ ಮಾತನಾಡಿದ್ದರೆ, ಸಮಸ್ಯೆಯನ್ನು ಪರಿಹರಿಸಬಹುದಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.
ಎನ್ಡಿಆರ್ಎಫ್ನ ಪ್ರಕಾರ ಬರಗಾಲದ ವ್ಯವಸ್ಥೆಗೆ ಹಣಕಾಸು ನೆರವು ಬಿಡುಗಡೆ ಮಾಡದಿರುವ ಕೇಂದ್ರದ ಕ್ರಮವು ಸಂವಿಧಾನದ 14 ಮತ್ತು 21 ನೇ ಪರಿಚ್ಛೇದದ ಅಡಿಯಲ್ಲಿ ಖಾತರಿಪಡಿಸಿದ ರಾಜ್ಯದ ಜನರ ಮೂಲಭೂತ ಹಕ್ಕುಗಳ “ಉಲ್ಲಂಘನೆ” ಎಂದು ಘೋಷಿಸಲು ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.