ಸಂವಿಧಾನದ ಆಶಯದಂತೆ ನಡೆದುಕೊಂಡಾಗ ಸಾಮಾಜಿಕ ಬದಲಾವಣೆ ಸಾಧ್ಯವಾಗುತ್ತದೆ : ಶಾಸಕ ಕೆ.ಆರ್.ರಮೇಶ್ ಕುಮಾರ್

ಶ್ರೀನಿವಾಸಪುರ: ಸಂವಿಧಾನದ ಆಶಯದಂತೆ ನಡೆದುಕೊಂಡಾಗ ಸಾಮಾಜಿಕ ಬದಲಾವಣೆ ಸಾಧ್ಯವಾಗುತ್ತದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ತಾಲ್ಲೂಕಿನ ದೊಡ್ಡಬಂದಾರ್ಲಹಳ್ಳಿಯಲ್ಲಿ ಮಂಗಳವಾರ, ಒಟ್ಟು ರೂ.40 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಅಂಬೇಡ್ಕರ್ ಸಮುದಾಯ ಭವನ, ಅಂಗನವಾಡಿ ಕಟ್ಟಡ ಹಾಗೂ ಶಾಲಾ ಕೊಠಡಿ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮಸ್ಥರು ಸೌಲಭ್ಯ ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ತಾಲ್ಲೂಕಿನ ಕೆರೆಗಳಿಗೆ ಕೆಸಿ ವ್ಯಾಲಿ ನೀರು ಹರಿಸಲಾಗುತ್ತಿದೆ. ಇನ್ನೊಂದು ವರ್ಷದಲ್ಲಿ ಎತ್ತಿನ ಹೋಳೆ ನೀರು ಹರಿದುಬರಲಿದೆ. ಆಗ ನೀರಿನ ಸಮಸ್ಯೆ ನೀಗುತ್ತದೆ. ಜಲ್ ಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೂ ನಲ್ಲಿ ಮೂಲಕ ನೀರು ಪೂರೈಸಲಾಗುವುದು ಎಂದು ಹೇಳಿದರು.
ಸ್ತ್ರೀ ಶಕ್ತಿ ಸಂಘದ ಸದಸ್ಯರಿಗೆ ಬಡ್ಡಿರಹಿತ ಸಾಲ ಸೌಲಭ್ಯ ಒದಗಿಸಲಾಗಿದೆ. ಕ್ಷೇತ್ರದಲ್ಲಿ ಪಕ್ಷಾತೀತವಾಗಿ ಮೂಲ ಸೌಕರ್ಯ ಕಲ್ಪಿಸಲಾಗಿದೆ. ಬಡವರಿಗೆ ಮನೆ ನಿರ್ಮಿಸಿ ಕೊಡಲಾಗಿದೆ. ಎಸ್ಸಿ ಎಸ್ಟಿ ಸಮುದಾಯದ ರೈತರು ಕೃಷಿ ಕೊಳವೆ ಬಾವಿ ನಿರ್ಮಿಸಲು ಅರ್ಜಿ ನೀಡಿದಲ್ಲಿ, ಸೌಲಭ್ಯ ಕಲ್ಪಿಸಲಾಗುವುದು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೌತಮಿ ಮುನಿರಾಜು, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್, ಮುಖಂಡರಾದ ಎನ್.ಮುನಿಸ್ವಾಮಿ, ತಿಮ್ಮಯ್ಯ, ಸಂಜಯ್ ರೆಡ್ಡಿ, ವಿ.ಆಂಜನೇಯಲು, ಮುಳಬಾಗಿಲಪ್ಪ, ವಿ.ಮುನಿಯಪ್ಪ, ಸಿಆರ್‍ಪಿ ಟಪರಾಜ್ ಇದ್ದರು.