ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ಇಲ್ಲಿನ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಮೇ.28 ರಂದು ಬೆಳಿಗ್ಗೆ 11 ಗಂಟೆಗೆ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.
ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಏರ್ಪಡಿಸಲಾಗಿರುವ ಈ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಸೇನಾನಿಗಳ ಸ್ಮರಣೆ ಮಾಡಲಾಗುವುದು ಎಂದು ಹೇಳಿದರು.
ಇದು ದೇಶ ಭಕ್ತಿ ಹಾಗೂ ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂಧಿಸಿದ ವಿಷಯವಾಗಿದ್ದು, ಯುವ ಸಮುದಾಯಕ್ಕೆ ಸ್ವಾಂತಂತ್ರ್ಯದ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ತಾಲ್ಲೂಕು ಕೇಂದ್ರದಲ್ಲಿ ನಡೆಯುವ ಈ ಮುಖ್ಯ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಎಲ್ಲಾ ಕಡೆಗಳಿಂದ ಜನರು ಭಾಗವಹಿಸಬೇಕಾಗಿದೆ. ಅದಕ್ಕೆ ಪೂರಕವಾಗಿ ಅಧಿಕರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಡಿ.ಆರ್.ರಾಜಪ್ಪ ತಂಡದಿಂದ ನಾಡಗೀತೆ ಹಗೂ ದೇಶಭಕ್ತಿ ಗೀತೆಗಳ ಗಾಯನ ಏರ್ಪಡಿಸಲಾಗಿದೆ. ಅಜಿತ್ ಶೆಟ್ಟಿ ಹರಂಜೆ ಅವರಿಂದ ಭಾಷಣ ಇರುತ್ತದೆ. ಟಿ.ಆರ್.ರಕ್ಷಿತ ತಂಡದಿಂದ ನಾಟಕ ಪ್ರದರ್ಶನ, ಭಾರತ ಸ್ವಾತಂತ್ರ್ಯ ಸಂಗ್ರಾಮಕ್ಕೆ ಕರ್ನಾಟಕದ ಕೊಡುಗೆ ಎಂಬ ಸಾಕ್ಷ್ಯ ಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕರಿ ಎಸ್.ಆನಂದ್, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಹುಸೇನ್ ಸಾಬ್, ತೋಟಗಾರಿಕೆ ಸಹಾಯಕ ನಿರ್ದೇಶಕ ಎಂ.ಶ್ರೀನಿವಾಸನ್, ಕೃಷಿ ಅಧಿಕಾರಿ ಮಂಜುನಾಥರೆಡ್ಡಿ, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಜಗದೀಶ್, ಗುರುರಾಜರಾವ್ ಇದ್ದರು.