ಶ್ರೀನಿವಾಸಪುರ: ಪ್ರತಿಯೊಬರೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗೌರವಿಸಬೇಕು – ತಹಶೀಲ್ದಾರ್ ಶಿರಿನ್ ತಾಜ್

ಶ್ರೀನಿವಾಸಪುರ: ಪ್ರತಿಯೊಬರೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗೌರವಿಸಬೇಕು ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.
ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ಉದ್ಯಾನದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಸಮಾರಂಭದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.
ಪ್ರಪಂಚದಲ್ಲಿ ಪ್ರಜಾಪ್ರಭುತ್ವ ಮಾದರಿ ಸರ್ಕಾರ ಜನಪ್ರಿಯವಾಗಿದೆ. ಪ್ರಜೆಗಳಿಂದ, ಪ್ರಜೆಗಳಿಗಾಗಿ ಹಾಗೂ ಪ್ರಜೆಗಳಿಗೋಸ್ಕರ ನಡೆಸುವ ಸರ್ಕಾರವನ್ನು ಪ್ರಜಾಪ್ರಭುತ್ವ ಸರ್ಕಾರ ಎಂದು ಕರೆಯುತ್ತೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು. ಇಲ್ಲಿ ತಮ್ಮ ಪ್ರತಿನಿಧಿಗಳನ್ನು ಚುನಾವಣೆ ಮೂಲಕ ಆಯ್ಕೆಮಾಡುವ ಅವಕಾಶ ಪ್ರಜೆಗಳಿಗಿದೆ. ಇನ್ನಾವ ವ್ಯವಸ್ಥೆಯಲ್ಲೂ ಅಂಥ ಅವಕಾಶ ಇರುವುದಿಲ್ಲ ಎಂದು ಹೇಳಿದರು.
ಸಂವಿಧಾನ ರಚನೆಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಪಾತ್ರ ಹಿರಿದು. ವಿವಿಧತೆಯಲ್ಲಿ ಏಕತೆ ಸಾಧಿಸಲು ಸಂವಿಧಾನ ನೆರವಾಗುತ್ತದೆ. ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸುತ್ತದೆ. ಸರ್ವ ಸಮ್ಮತವಾದ ಸಂವಿಧಾನ ನೀಡುವುದರ ಮೂಲಕ ಬಾಬಾ ಸಾಹೇಬರು ವಿಶ್ವಮಾನ್ಯರಾಗಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂವಿಧಾನದ ಪೀಠಿಕೆ ಓದಲಾಯಿತು. ಸಂವಿಧಾನ ಪಾಲಿಸುವ ಪ್ರತಿಜ್ಞಾ ವಿಧಿ ಕೈಗೊಳ್ಳಲಾಯಿತು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎನ್.ಶಿವಕುಮಾರಿ, ಉಪ ತಹಶೀಲ್ದಾರ್ ಕೆ.ಎಲ್.ಜಯರಾಮ್, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಬಿಸಿಎಂ ಅಧಿಕಾರಿ ಎನ್.ನರಸಿಂಹಮೂರ್ತಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರಾಜೇಶ್, ವ್ಯವಸಾಯ ಇಲಾಖೆ ಸಹಾಯಕ ನಿರ್ದೇಶಕ ಕೆ.ಸಿ.ಮಂಜುನಾಥ್, ಅಭಿಷೇಕ್, ಮುಖಂಡರಾದ ರಾಮಚಂದ್ರ, ನರಸಿಂಹ, ನಾರಾಯಣಸ್ವಾಮಿ, ಶ್ರೀನಿವಾಸ್, ಪಿ.ವಾಸು, ಮುಳಬಾಗಿಲಪ್ಪ, ಗೋಪಾಲ್ ಇದ್ದರು.