ಶ್ರೀನಿವಾಸಪುರ: ವಿದ್ಯಾರ್ಥಿಗಳು ದೇಶದ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು. ಸ್ವಾತಂತ್ರ್ಯ ಹೋರಾಟಗಾರರಿಂದ ಸ್ಫೂರ್ತಿ ಪಡೆದು ರಾಷ್ಟ್ರದ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ವಿಐಪಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್ ಹೇಳಿದರು.
ವಿಐಪಿ ಶಾಲಾ ಆಟದ ಮೈದಾನದಲ್ಲಿ ಮಂಗಳವಾರ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಸ್ವಾತಂತ್ಯ ಯೋಧರು ತ್ಯಾಗ ಬಲಿದಾನದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ಸ್ವಾತಂತ್ರ್ಯಾನಂತರ ದೇಶ ಪ್ರಗತಿ ಪಥದಲ್ಲಿ ಸಾಗುತ್ತಿದೆ ಎಂದು ಹೇಳಿದರು.
ಪ್ರತಿಯೊಬ್ಬರೂ ದೇಶದ ಕಾನೂನು ಗೌರವಿಸಬೇಕು. ದೇಶದ ಹಿತ ರಕ್ಷಣೆಗೆ ಪೂರಕವಲ್ಲದ ಯಾವುದೇ ಚಟುವಟಿಕೆಯಲ್ಲಿ ಭಾಗವಹಿಸಬಾರದು. ಸ್ವಾತಂತ್ರ್ಯ ಸಂಗ್ರಾಮದ ಚರಿತ್ರೆ ಓದಬೇಕು. ಸ್ವಾತಂತ್ರ್ಯದ ಮಹತ್ವ ಅರಿಯಬೇಕು ಎಂದು ಹೇಳಿದರು.
ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಡಾ. ಕವಿತಾ ಸ್ವಾತಂತ್ರ್ಯ ದಿನಾಚರಣೆ ಮಹತ್ವ ಕುರಿತು ಮಾತನಾಡಿದರು. ಮುಖ್ಯ ಶಿಕ್ಷಕಿ ಮಂಜಿತ್ ಕೌರ್ ಇದ್ದರು.
ಶಾಲಾ ವಿದ್ಯಾರ್ಥಿಗಳು ಆಕರ್ಷಕ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ದೇಶ ಭಕ್ತಿ ಗೀತೆಗಳ ಗಾಯನ ಏರ್ಪಡಿಸಲಾಗಿತ್ತು. ಸ್ವಾತಂತ್ರ್ಯ ದಿನಾಚರಣೆ ವಿಶೇಷ ಕ್ರೀಡಾ ಕೂಟದಲ್ಲಿ ವಿಜೇತರಾಗಿದ್ದ ಕ್ರೀಡಾಪಟುಗಳು ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣ ಪತ್ರ ನೀಡಲಾಯಿತು.