ಶ್ರೀನಿವಾಸಪುರ: ನಿತ್ಯ ವ್ಯವಹಾರದಲ್ಲಿ ಕನ್ನಡ ಭಾಷೆ ಬಳಸಬೇಕು ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.
ಪಟ್ಟಣದ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮತಿಯಿಂದ ಮಂಗಳವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಗಡಿ ಭಾಗದಲ್ಲಿ ಕನ್ನಡ ಬಾಷೆ ಬಗ್ಗೆ ಗೌರವ ಭಾವನೆ ಇದ್ದರೆ ಸಾಲದು. ಹೃದಯದ ಭಾಷೆಯಾಗಿದ್ದರೆ ಸಾಲದು, ಅದು ಮಾತಾಗಿ ಬರಬೇಕು ಎಂದರು.
ಗಡಿ ಭಾಗದ ಪೋಷಕರು ತಮ್ಮ ಮಕ್ಕಳೊಂದಿಗೆ ಕನ್ನಡದಲ್ಲಿ ಮಾತನಾಡಬೇಕು. ಕನ್ನಡದ ಹಿರಿಮೆ ಕುರಿತು ಪರಿಚಯ ಮಾಡಿಕೊಡಬೇಕು. ಕನ್ನಡ ಕೃತಿಗಳ ಓದಿಗೆ ಪ್ರೇರಣೆ ನೀಡಬೇಕು. ಕನ್ನಡ ಪರಿಸರ ನಿರ್ಮಾಣ ಮಾಡಲು ಶ್ರಮಿಸಬೇಕು ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಬಿ.ಕೃಷ್ಣಪ್ಪ, ಉಪನ್ಯಾಸಕ ಎನ್.ಶಂಕರೇಗೌಡ ನಾಡು ನುಡಿಯ ಬಗ್ಗೆ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ಸಾಧನೆ ಮಾಡಿರುವ ಕೆ.ನರಸಿಂಹಮೂರ್ತಿ, ಡಾ. ಉಮಾಶಂಕರ್, ಎಸ್.ಆರ್.ಅಶೋಕ್‍ರೆಡ್ಡಿ, ಕೆ.ನಾಗರತ್ನಮ್ಮ, ಮುರಳಿ ಅವರನ್ನು ಸನ್ಮಾನಿಸಲಾಯಿತು. ವಿವಿಧ ಶಾಲೆಗಳ ವಿದ್ಯಾರ್ಥಿಗಳು ಕನ್ನಡ ನಾಡಿನ ಮಹತ್ವ ಸಾರುವ ಕನ್ನಡ ಗೀತೆಗಳಿಗೆ ನೃತ್ಯ ಪ್ರದರ್ಶನ ನೀಡಿದರು. ನಾಡು ನುಡಿ ಅಭಿವೃದ್ಧಿಗಾಗಿ ಶ್ರಮಿಸಿದ ವ್ಯಕ್ತಿಗಳ ವೇಷ ಹಾಕಿ ರಂಜಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ, ತಾಲ್ಲೂಕು ವೈದ್ಯಾಧಿಕಾರಿ ಡಾ. ಎಂ.ಸಿ.ವಿಜಯ, ಪಶುಪಾಲನೆ ಇಲಾಖೆ ಸಹಾಯಕ ನಿರ್ದೇಶಕ ಡಾ. ಮಂಜುನಾಥರೆಡ್ಡಿ ಇದ್ದರು.ಸಹಾಯಕ ಕೃಷಿ ನಿರ್ದೇಶಕ ಮಂಜುನಾಥ್, ಹಿರಿಯ ತೋಟಗಾರಿಕಾ ಸಹಾಯಕ ನಿರ್ದೇಶಕ ಎಂ.ಶ್ರೀನಿವಾಸನ್, ರೇಷ್ಮೆ ಕೃಷಿ ಸಹಾಯಕ ನಿರ್ದೇಶಕ ಕೃಷ್ಣಪ್ಪ, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಪುರಸಭಾಧ್ಯಕ್ಷೆ ಲಲಿತಾ ಶ್ರೀನಿವಾಸ್, ಮುಖ್ಯಾಧಿಕಾರಿ ಎಂ.ಜಯರಾಂ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಪಿ.ಎಸ್.ಮಂಜುಳ, ವೆಂಕಟೇಶ್ವರ ಗ್ರಾಮೀಣ ಆರೋಗ್ಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ. ವೈ.ವಿ.ವೆಂಕಟಾಚಲ, ಎಪಿಎಂಸಿ ಕಾರ್ಯದರ್ಶಿ ಉಮಾ, ವಿವಿಧ ಕನ್ನಡಪರ ಸಂಘಟನೆಗಳ ಮುಖ್ಯಸ್ಥರಾದ ಶ್ರೀನಿವಾಸ್, ರಮೇಶ್, ಬಲರಾಮೇಗೌಡ, ಆರ್.ರವಿಕುಮಾರ್ ತಾಲ್ಲೂಕು ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸುಬ್ರಮಣಿ ಇದ್ದರು.
ಮೆರವಣಿಗೆ: ಪಟ್ಟಣದಲ್ಲಿ ಜಡಿಮಳೆ ನಡುವೆ ಭುವನೇಶ್ವರಿ ಮೆರವಣಿಗೆ ನಡೆಯಿತು. ಭುವನೇಶ್ವರಿ ಭಾವ ಚಿತ್ರ ಹೊತ್ತ ವಿವಿಧ ಇಲಾಖೆಗಳ ಪಲ್ಲಕಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು.