ಶ್ರೀನಿವಾಸಪುರ: ಸಾಮಾಜಿಕ ಸಮಾನತೆ ಹಾಗೂ ವ್ಯಕ್ತಿಗೌರವ ಕುವೆಂಪು ಸಾಹಿತ್ಯದ ಪ್ರಮುಖ ಅಂಶವಾಗಿದೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.
ಪಟ್ಟಣದ ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮತಿ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಕುವೆಂಪು ಜನ್ಮದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಕುವೆಂಪು ಶ್ರೇಷ್ಠ ಕವಿ ಮಾತ್ರವಲ್ಲದೆ, ಪ್ರಖರ ಮಾನವತಾವಾದಿಯಾಗಿದ್ದರು ಎಂದು ಹೇಳಿದರು.
ತಾಲ್ಲೂಕಿನಲ್ಲಿ ರೂ.350 ಕೋಟಿ ವೆಚ್ಚದಲ್ಲಿ ಜಲ ಜೀವನ ಮಿಷನ್ ಯೋಜನೆ ಮೂಲಕ ಪ್ರತಿ ಮನೆಗೂ ಕುಡಿಯುವ ನೀರು ಪೂರೈಸಲಾಗುವುದು. ಯುವ ಸಮುದಾಯಕ್ಕೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಪಟ್ಟಣದ ಹೊರವಲಯದಲ್ಲಿ ಕೈಗಾರಿಕಾ ಕ್ಷೇತ್ರ ಸ್ಥಾಪಿಸಲಾಗುವುದು. ತಾಲ್ಲೂಕಿನಿಂದ ಆಂಧ್ರಪ್ರದೇಶಕ್ಕೆ ಹರಿದುಹೋಗುವ ಮಳೆ ನೀರನ್ನು ತಾಲ್ಲೂಕಿನ ಕೆರೆಗಳಿಗೆ ಹರಿಸಲು ಅಗತ್ಯವಾದ ಯೋಜನೆ ರೂಪಿಸಿ ಜಾರಿಗೆ ತರಲಾಗುವುದು. ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದ ಸರ್ವತೋಮುಖ ಅಭಿವೃದ್ಧಿಗೆ ಸಮಾನ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ತಹಶೀಲ್ದಾರ್ ಜಿ.ಎನ್.ಸುಧೀಂದ್ರ ಮಾತನಾಡಿ, ಕುವೆಂಪು ಸಾಹಿತ್ಯ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಕನ್ನಡ ಭಾಷೆಗೆ ಗೌರವ ತಂದುಕೊಟ್ಟಿದ್ದಾರೆ. ಸಾಹಿತಿಗಳಿಗೆ ಮಾದರಿಯಾಗಿ ಬದುಕಿದ್ದಾರೆ. ವಿದ್ಯಾರ್ಥಿಗಳು ಅವರ ಸಾಹಿತ್ಯ ಕೃತಿಗಳನ್ನು ಓದಬೇಕು. ಅವರ ಆದರ್ಶದ ಬೆಳಕಲ್ಲಿ ಬದುಕು ಕಟ್ಟಿಕೊಳ್ಳಬೇಕು ಎಂದು ಹೇಳಿದರು.
ಭೈರವೇಶ್ವರ ವಿದ್ಯಾನಿಕೇತನದ ನಿರ್ದೇಶಕ ಎ.ವೆಂಕಟರೆಡ್ಡಿ ಕುವೆಂಪು ಅವರ ಜೀವನ ಹಾಗೂ ಸಾಧನೆ ಕುರಿತು ಮಾತನಾಡಿ, ಕುವೆಂಪು ಪ್ರಕೃತಿಯ ಆರಾಧಕರಾಗಿದ್ದರು. ಅವರ ಸಾಹಿತ್ಯ ಕೃತಿಗಳಲ್ಲಿ ನಿಸರ್ಗ ಸೌಂದರ್ಯ ಅಡಕವಾಗಿದೆ. ಅವರ ಕೃತಿಗಳಲ್ಲಿ ವ್ಯಕ್ತಿ, ವ್ಯಕ್ತಿತ್ವ ಹಾಗೂ ಸಾಮಾಜಿಕ ಒಡನಾಟ ಓದುಗರನ್ನು ಬೆರಗುಗೊಳಿಸುತ್ತದೆ ಎಂದು ಹೇಳಿದರು.
ಉಪ ತಹಶೀಲ್ದಾರ್ ಕೆ.ವಿ.ಜಯರಾಂ, ಶಿರಸ್ತೇದಾರ್ ಬಲರಾಮಚಂದ್ರೇಗೌಡ, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಶಿವಕುಮಾರಿ, ಸಹಾಯಕ ಕೃಷಿ ನಿರ್ದೇಶಕ ಕೆ.ಸಿ.ಮಂಜುನಾಥ್, ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಎಂ.ಶ್ರೀನಿವಾಸನ್, ಸಹಾಯಕ ರೇಷ್ಮೆ ನಿರ್ದೇಶಕ ಕೃಷ್ಣಪ್ಪ, ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಸಿ.ಮುನಿಲಕ್ಷ್ಮಯ್ಯ, ಬೆಸ್ಕಾಂ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಮತೀರ್ಥ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವಿ.ನಾರಾಯಣಸ್ವಾಮಿ, ಅಧಿಕಾರಿಗಳಾದ ನವೀನ್, ರಾಜೇಶ್, ರಾಮಕೃಷ್ಣಪ್ಪ, ಮಂಜುನಾಥ್, ಜನಾರ್ಧನ್, ಹರಿ, ತಿಪ್ಪಣ್ಣ ಇದ್ದರು.