ಶ್ರೀನಿವಾಸಪುರ: ವಿದ್ಯಾರ್ಥಿಗಳು ವೈಜ್ಞಾನಿ ಮನೋಭಾವ ಬೆಳೆಸಿಕೊಳ್ಳಬೇಕು. ವಿಜ್ಞಾನ ವಿಷಯಕ್ಕೆ ಸಂಬಂಧಿಸಿದ ಸ್ಪರ್ಧೆಗಳಲ್ಲಿ ಸ್ವಯಂ ಪ್ರೇರಣೆಯಿಂದ ಭಾಗವಹಿಸಬೇಕು ಎಂದು ಮೊರಾರ್ಜಿ ದೇಸಾಯಿ ವಸತಿ ಶಾಲೆ ಸುಗುಣ ಹೇಳಿದರು.
ತಾಲ್ಲೂಕಿನ ಸೋಮಯಾಜಲಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ, ಈಚೆಗೆ ಕೋಲಾರದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಪ್ರೌಢ ಶಾಲಾ ವಿಜ್ಞಾನ ವಸ್ತುಪ್ರದರ್ಶನದಲ್ಲಿ ಪರಿಸರ ಸಮಸ್ಯೆಗಳು, ಹವಾಮಾನ ಬದಲಾವಣೆ ಹಾಗೂ ಪರ್ಯಾಯ ಶಕ್ತಿ ಮೂಲಕಗಳು ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಾದ ಎಂ.ಎಸ್.ಹೇಮಂತ್ ಮತ್ತು ಆರ್.ಯಶ್ವಂತ್ ಕುಮಾರ್ ಅವರಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಗುಣ ಹೊಂದಬೇಕು. ಯಾವುದೇ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಲು ಪ್ರಯತ್ನಿಸಬೇಕು. ಪ್ರೇಕ್ಷಕರ ಮೆಚ್ಚುಗೆಗಿಂತ ಮಿಗಿಲಾದ ಪ್ರಶಸ್ತಿ ಇನ್ನೊಂದಿಲ್ಲ. ಗೆಲುವನ್ನು ನಮ್ರತೆಯಿಂದ ಸ್ವೀಕರಿಸಬೇಕು ಎಂದು ಹೇಳಿದರು.
ವಿಜ್ಞಾನ ಶಿಕ್ಷಕ ವಿ.ಶ್ರೀನಿವಾಸ್ ಮಾತನಾಡಿ, ಶಾಲಾ ವಿದ್ಯಾರ್ಥಿಗಳು ವಿವಿಧ ಹಂತಗಳಲ್ಲಿ ಉತ್ತಮ ಪ್ರದರ್ಶನ ನೀಡಿ, ಜಿಲ್ಲಾ ಮಟ್ಟಕ್ಕೆ ಹೋಗಿದ್ದರು. ಅಲ್ಲೂ ಸಹ ಉತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಭಾಗವಹಿಸಲು ಆಯ್ಕೆಯಾಗಿರುವುದು ಸಂತೋಷದ ಸಂಗತಿಯಾಗಿದೆ ಎಂದು ಹೇಳಿದರು.
ರಾಜ್ಯ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಗೆಲುವು ಸಾಧಿಸಲು ಪೂರಕವಾಗಿ ತಯಾರಿ ನಡೆಸಬೇಕು. ಅದಕ್ಕೆ ಪೂರಕವಾಗಿ ಶಿಕ್ಷರ ಮಾರ್ಗದರ್ಶನ ಪಡೆದುಕೊಳ್ಳಬೇಕು. ಇತರ ವಿದ್ಯಾರ್ಥಿಗಳು ಪ್ರತಿಭಾವಂತ ವಿದ್ಯಾರ್ಥಿಗಳ ಮಾದರಿ ಅನುಸರಿಸಬೇಕು ಎಂದು ಹೇಳಿದರು.
ಶಾಲಾ ಶಿಕ್ಷಕರು ಹಾಗೂ ಗ್ರಾಮಸ್ಥರು ಇದ್ದರು.