ಶ್ರೀನಿವಾಸಪುರ ಗಣರಾಜ್ಯೋತ್ಸವ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ನಡೆದುಕೊಳ್ಳಬೇಕು: ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಎಲ್ಲರೂ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ನಡೆದುಕೊಳ್ಳಬೇಕುಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಹೇಳಿದರು.  ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ತಾಲ್ಲೂಕು ರಾಷ್ಟ್ರೀಯಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬುಧವಾರ ಏರ್ಪಡಿಸಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸರ್ಕಾರದ ಸೌಲಭ್ಯಗಳು ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ತಲುಪಿದಾಗ ಮಾತ್ರ ಅಭಿವೃದ್ಧಿ ಸಾಧ್ಯವಾಗುತ್ತದೆ. ಅದಕ್ಕೆ ಸಂವಿಧಾನ ಪೂರಕವಾಗಿದೆ ಎಂದು ಹೇಳಿದರು.  ಪೊಲೀಸ್ ಇನ್ಸ್ಪೆಕ್ಟರ್ ಸಿ.ರವಿಕುಮಾರ್ ಮಾತನಾಡಿ, ಡಾ. ಬಿ.ಆರ್.ಅಂಬೇಡ್ಕರ್ ಅವರ ಪರಿಶ್ರಮದ ಪರಿಣಾಮವಾಗಿ ನಾವು ಒಂದು ಶ್ರೇಷ್ಠ ಸಂವಿಧಾನ ಪಡೆಯಲು ಸಾಧ್ಯವಾಯಿತು. ಪ್ರಪಂಚದ ಹಲವು ದೇಶಗಳ ಸಂವಿಧಾನಗಳನ್ನು ಆಧ್ಯಯನ ಮಾಡಿ, ನಮ್ಮ ದೇಶದ ಸಾಮಾಜಿಕ ವ್ಯವಸ್ಥೆಗೆ ಪೂರಕವಾದ ಸಂವಿಧಾನ ರಚಿಸಲಾಗಿದೆ. ಸಂವಿಧಾನ ನೀಡಿರುವ ಹಕ್ಕುಗಳು ಹಾಗೂ ಕರ್ತವ್ಯಗಳನ್ನು ಸಮ ಭಾವದಿಂದ ಸ್ವೀಕರಿಸಿ ಕಾರ್ಯರೂಪಕ್ಕೆ ತರಬೇಕು ಎಂದು ಹೇಳಿದರು.  ಈ ಸಂದರ್ಭದಲ್ಲಿ ಪಟ್ಟಣದ ಅಂಬೇಡ್ಕರ್ ಉದ್ಯಾನದಲ್ಲಿನ ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಮಾಲಾರ್ಪಣೆ ಮಾಡಿದರು.  ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ, ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್, ಉಪಾಧ್ಯಕ್ಷೆ ಆಯಿಷಾ ನಯಾಜ್, ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಹುಸೇನ್ ಸಾಬ್, ವಲಯ ಅರಣ್ಯ ಅಧಿಕಾರಿ ಎನ್ ಸುರೇಶ್, ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಗುರುರಾಜರಾವ್, ವಿನೋದ್, ಸಹಾಯಕ ಕೃಷಿ ನಿರ್ದೇಶಕ ಧನಂಜಯ್, ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಶ್ರೀನಿವಾಸ್, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ನಾಗರಾಜ್, ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥರೆಡ್ಡಿ ಇದ್ದರು.