ಶ್ರೀನಿವಾಸಪುರ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ದಾನಿಗಳ ನೆರವು ಪಡೆದು ಶೈಕ್ಷಣಿಕ ಅಭಿವೃದ್ಧಿ ಹೊಂದಬೇಕು ಎಂದು ಸಮಾಜ ಸೇವಕ ಎಚ್.ನಾರಾಯಣಸ್ವಾಮಿ ಹೇಳಿದರು.
ತಾಲ್ಲೂಕಿನ ಕಲ್ಲೂರು ಗ್ರಾಮದ ಆದರ್ಶ ವಿದ್ಯಾಲಯದಲ್ಲಿ ಬುಧವಾರ ವಿದ್ಯಾರ್ಥಿಗಳಿಗೆ ತಟ್ಟೆ ಲೋಟ ವಿತರಿಸಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಕೀಳರಿಮೆ ಬಿಡಬೇಕು. ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಿಂತ ಕಡಿಮೆ ಇಲ್ಲದಂತೆ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.
ಶಾಲೆಯ ಮುಖ್ಯ ಶಿಕ್ಷಕಿ ಮಮತಾ ರಾಣಿ ಮಾತನಾಡಿ, ಸರ್ಕಾರ ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಪೂರಕವಾದ ಎಲ್ಲ ಯೋಜನೆಗಳನ್ನೂ ಜಾರಿಗೆ ತಂದಿದೆ. ಜತೆಗೆ ದಾನಿಗಳು ಸರ್ಕಾರಿ ಶಾಲಾ ಮಕ್ಕಳ ನೆರವಿಗೆ ಬರುತ್ತಿದ್ದಾರೆ. ಮಕ್ಕಳ ಶೈಕ್ಷಣಿಕ ಅಗತ್ಯ ಪೂರೈಸುವಲ್ಲಿ ಸಹಾಯ ಹಸ್ತ ಚಾಚಿದ್ದಾರೆ. ಅದರ ಪೂರ್ಣ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು.
ಕೋಮುಲ್ ಮಾಜಿ ನಿರ್ದೇಶಕ ಪಾಳ್ಯ ಬೈರೆಡ್ಡಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ.ಪಿ.ನಾಗೇಶ್, ಮುಖಂಡ ಬೈರಾರೆಡ್ಡಿ, ತಾಲ್ಲೂಕು ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕಿ ಸುಲೋಚನ, ಎಸ್ಡಿಎಂಸಿ ಅಧ್ಯಕ್ಷ ರಾಜೇಂದ್ರ ಪ್ರಸಾದ್, ಶಿಕ್ಷಕ ಲೋಕೇಶ್, ಶಿಕ್ಷಕಿ ಮಂಜುಳ ಇದ್ದರು.