

ಶ್ರೀನಿವಾಸಪುರ: ವಿದ್ಯಾರ್ಥಿಗಳು ಗುಣಾತ್ಮಕ ಫಲಿತಾಂಶ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ಹೇಳಿದರು.
ಪಟ್ಟಣದ ಹೊರವಲಯದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕೋಲಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ 8,9,10ನೇ ತರಗತಿ ವಿದ್ಯಾರ್ಥಿಗಳಿಗೆ ವಿಜ್ಞಾನ, ಗಣಿತ ಹಾಗೂ ಇಂಗ್ಲೀಷ್ ವಿಷಯಗಳ ಬುನಾದಿ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಮೊಬೈಲ್ ಬಳಕೆ ಕಡಿಮೆ ಮಾಡಬೇಕು. ಅನಗತ್ಯವಾಗಿ ಮೊಬೈಲ್ ಬಳಸುವುದರಿಂದ ಅಮೂಲ್ಯವಾದ ಸಮಯ ವ್ಯರ್ಥವಾಗುತ್ತದೆ. ಕೆಲವೊಮ್ಮೆ ಮಕ್ಕಳು ಶಿಕ್ಷಣದಿಂದ ದೂರ ಸರಿಯುವ ಅಪಾಯವೂ ಇರುತ್ತದೆ. ಪೋಷಕರು ಈ ವಿಷಯದಲ್ಲಿ ಎಚ್ಚರ ವಹಿಸಬೇಕು. ಮಕ್ಕಳು ಸರಿಯಾದ ದಾರಿಯಲ್ಲಿ ನಡೆಯುವಂತೆ ನೋಡಿಕೊಳ್ಳಬೇಕು. ಸಾಧನೆಗೆ ಪೂರಕವಾದ ಸಾಮಥ್ರ್ಯ ಗಳಿಸುವಲ್ಲಿ ಸಹಕರಿಸಬೇಕು ಎಂದು ಹೇಳಿದರು.
ಆದಾಯ ತೆರಿಗೆ ಇಲಾಖೆ ಸಹಾಯಕ ಕಮೀಷನರ್ ಕೆ.ಚಂದ್ರಕಳ ನಾರಾಯಣ ಮಾತನಾಡಿ, ಹೆಣ್ಣು ಮಕ್ಕಳು ಶೈಕ್ಷಣಿಕವಾಗಿ ಮುಂದೆ ಬರಬೇಕು. ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ಸಾಧನೆ ಹಾದಿಯಲ್ಲಿ ಸಾಗಬೇಕು ಎಂದು ಹೇಳಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಾಮಚಂದ್ರಪ್ಪ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಡಿ.ಚೆನ್ನಬಸಪ್ಪ, ಜಿಲ್ಲಾ ಹಿಂದುಳಿದ ವರ್ಗಗಳ ಅಭಿವೃದ್ಧಿ ಅಧಿಕಾರಿ ಸೌಮ್ಯ ವರ್ಣಿಕರ್, ಡಿವೈಎಸ್ಪಿ ಜಯಶಂಕರ್, ಪೊಲೀಸ್ ಇನ್ಸ್ಪೆಕ್ಟರ್ ಜೆ.ಸಿ.ನಾರಾಯಣಸ್ವಾಮಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ಪ, ಪ್ರಾಂಶುಪಾಲ ಆರ್.ವಿ.ಚಂದ್ರು, ಕೆ.ನರಸಿಂಹಮೂರ್ತಿ, ಶಿಕ್ಷಕ ಸುಬ್ರಮಣಿ ಇದ್ದರು.