

ಬೆಂಗಳೂರು : ಮದುವೆಯಾಗುವುದಾಗಿ ನಂಬಿಸಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಹಾಗೂ ಮದುವೆಯಾಗುವಂತೆ ಒತ್ತಾಯಿಸಿದಾಗ ಕೊಲೆ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಹುಣಸಮಾರನಹಳ್ಳಿಯ ಮದ್ದಾವಣಪುರ ದೇವವೀರ ಸಂಸ್ಥಾನ ಮಠದ ಶ್ರೀಗುರು ನಂಜೇಶ್ವರ ಶಿವಾಚಾರ್ಯ ಮಹಾಸ್ವಾಮಿ ಅಲಿಯಾಸ್ ದಯಾನಂದ (45) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.
ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬಳು ಈಶಾನ್ಯ ವಿಭಾಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮಹಿಳೆ ನೀಡಿದ ದೂರು ಹಿನ್ನೆಲೆಯಲ್ಲಿ ಹುಣಸಮಾರನಹಳ್ಳಿ ಮಠದ ಸ್ವಾಮೀಜಿಯನ್ನು ಬಂಧಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಯಲಹಂಕದ ಬಳಿ ಇರುವ ಹುಣಸಮಾರನಹಳ್ಳಿಯ ರಾಜರಾಜೇಶ್ವರಿ ನಗರದಲ್ಲಿ ಮಠ ಇದೆ. ಮಠದ ಸ್ವಾಮೀಜಿಯ ಸಂಬಂಧಿಯೇ ಆಗಿರುವ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದೂ ಪೊಲೀಸರು ತಿಳಿಸಿದ್ದಾರೆ.

